ಮಂಗಳೂರು, ನ 01 : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ನ.01ರ ಸೋಮವಾರ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.
ಆ ಬಳಿಕ ಮಾತನಾಡಿದ ಸಚಿವರು, ಕನ್ನಡ ರಾಜ್ಯೋತ್ಸವ ಶುಭಾಷಯಗಳನ್ನು ತಿಳಿಸಿ, ಕೋವಿಡ್-19 ಸೋಂಕಿನ ಎರಡನೇ ಅಲೆ ನಿರ್ವಹಣೆಯಲ್ಲಿ ಜೀವದ ಹಂಗು ತೊರೆದು ತಮ್ಮನ್ನು ತೊಡಗಿಸಿಕೊಂಡಿರುವ ವೈದ್ಯರು, ಶುಶ್ರೂಷಕರು, ಇತರ ವೈದ್ಯಕೇತರ ಸಿಬ್ಬಂದಿ, ಪೊಲೀಸರು, ಜಿಲ್ಲಾ ಆಡಳಿತ, ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಯವರನ್ನು ಕೃತಜ್ಞತಾ ಪೂರ್ವಕವಾಗಿ ನೆನೆದರು.
ಆರೋಗ್ಯ ಇಲಾಖೆಯೂ ಸಂಭಾವ್ಯ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲೆಯಲ್ಲಿ ಈಗಾಗಲೇ 12 ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳು ಹಾಗೂ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ತಲಾ 5 ಬೆಡ್‌ಗಳಿಗೆ ಐಸಿಯು ವೆಂಟಿಲೇಟರ್ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದರು.
ಪ್ರವಾಸೋದ್ಯಮ ಇಲಾಖೆಯಿಂದ ಪಣಂಬೂರು, ತಣ್ಣೀರು ಬಾವಿ, ಸೊಮೇಶ್ವರ, ತಲಪಾಡಿ, ಸಸಿಹಿತ್ಲು, ಸುರತ್ಕಲ್, ಉಳ್ಳಾಲ ಹಾಗೂ ಮುಕ್ಕ ಕಡಲ ತೀರಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಇನ್ನು ಈಗಾಗಲೇ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರಕಾರದ ಅನುಮೋದನೆ ದೊರೆತಿದೆ. ಅದರಿಂದ ಪ್ಲಾಸ್ಟಿಕ್ ಆಧಾರಿತ ಆಧುನಿಕ ಉತ್ಫನ್ನಗಳನ್ನು ತಯಾರಿಸುವ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ನಿರ್ಮಾಣವಾಗಲಿದ್ದು, ಸಾಕಷ್ಟು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.
ಮುಖ್ಯಮಂತ್ರಿಗಳ ಕೋವಿಡ್ ಪ್ಯಾಕೇಜ್-2 ನಲ್ಲಿ ಘೋಷಿಸಿದಂತೆ ತಲಾ ಮೂರು ಸಾವಿರ ರೂ.ಗಳಂತೆ 1558 ಮೀನುಗಾರರಿಗೆ 46.74 ಲಕ್ಷ ರೂ. ಗಳನ್ನು ಪರಿಹಾರ ವಿತರಿಸಲಾಗಿದೆ. ಆಳ ಸಮುದ್ರ ಮೀನುಗಾರಿಕೆಯ ಬಲವರ್ಧನೆಗೆ ಪ್ರೋತ್ಸಾಹ ನೀಡುತಿದ್ದು, 72 ಲಕ್ಷ ರೂ. ಗಳ ಸಹಾಯಧನವನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಅಧಿಕಾರಿಗಳು ಹಾಗೂ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.