ಮಂಗಳೂರು: ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಕಳಪೆ ಕಾಮಗಾರಿಯ ದೂರುಗಳು ಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಎಚ್ಚರಿಸಿದರು.
ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಮಂಗಳವಾರ ವೀಕ್ಷಿಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಾಮಗಾರಿಗಳು ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು. ಕೇಂದ್ರ ಸರ್ಕಾರ ಮೇ ತಿಂಗಳ ಒಳಗೆ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದ್ದು, ನಾವು ಆದಷ್ಟು ಶೀಘ್ರ ಕಾಮಗಾರಿ ಮುಗಿಸಲು ಒತ್ತು ನೀಡಿದ್ದೇವೆ. ಮಾರ್ಚ್ ಅಂತ್ಯದ ಗಡುವು ನೀಡಲಾಗಿದೆ. ಮಂಗಳೂರಿನ ಅಭಿವೃದ್ಧಿಗೆ ಇನ್ನೂ ₹100 ಕೋಟಿ ಅನುದಾನದ ಅಗತ್ಯವಿದ್ದು, ಈ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆಯಲಾಗಿದೆ ಎಂದು ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೂ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಧಿಕಾರಿಗಳು ಇದ್ದರು.