ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆ ಪ್ರದೇಶದಲ್ಲಿ ಕೊಲೆಯಾದ ರೀತಿಯಲ್ಲಿ ಪತ್ತೆಯಾದ ಯುವಕನ ಮೃತದೇಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ನಿತಿನ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸೋಮವಾರ ಬೆಳಗ್ಗೆ ನಿತಿನ್ ಅವರಿಗೆ ವಾಟ್ಸಾಪ್ ಮೂಲಕ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಬಗ್ಗೆ ಭಾವಚಿತ್ರ ಸಮೇತ ಮಾಹಿತಿ ಲಭಿಸಿತ್ತು. ಚಿತ್ರವನ್ನು ಪರಿಶೀಲಿಸಿದಾಗ ಮೃತ ವ್ಯಕ್ತಿ ತನ್ನ ಸಹೋದರ ಯತೀಶ್ (33) ಎಂದು ತಿಳಿದುಬಂದಿತ್ತು.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಯಿತು. ಬೆಳಗಿನ ವೇಳೆ ತನ್ನ ಸಹೋದರ ಯತೀಶ್ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ ಎಂದು ಆರೋಪಿಸಿ ಮೃತ ಯತೀಶ್ ಸಹೋದರ ನಿತಿನ್ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪದಂಗಡಿ ನಿವಾಸಿ ಇಬ್ರಾಹಿಂ (54) ಎಂಬುವರು ಯತೀಶ್ ಮೇಲೆ ಹಲ್ಲೆ ನಡೆಸಿರುವುದಾಗಿ ಹಾಗೂ ಈ ಹಲ್ಲೆಯಿಂದ ಯತೀಶ್ ಮೃತಪಟ್ಟಿರುವುದಾಗಿ ಮೃತ ವ್ಯಕ್ತಿಯ ಸಹೋದರ ನಿತಿನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 65/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 115(2), 103 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ಹಲ್ಲೆಯ ಹಿನ್ನೆಲೆ ಕುರಿತು ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಸತ್ಯಾಂಶ ಬಹಿರಂಗವಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Discover more from Coastal Times Kannada
Subscribe to get the latest posts sent to your email.







Discussion about this post