ಉಡುಪಿ, ಆ.2: ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ತಡೆದು ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಐವರು ಸಂಘ ಪರಿವಾರದ ಕಾರ್ಯಕರ್ತರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳನ್ನು ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ಸಫಲಿಗ ತೆಳ್ಳಾರು ಎಂದು ಗುರುತಿಸಲಾಗಿದೆ.
ಜು.29ರಂದು ಮಂಗಳೂರಿನ ಹೆಸರಾಂತ ಕಾಲೇಜುವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ರವಿವಾರದಂದು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು. ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಇವರ ಕಾರನ್ನು ಹಿಂಬಾಲಿಸಿ ಬಂದ ಮತ್ತೊಂದು ಕಾರು ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಚ್ಯ ಶಬ್ದಗಳಿಂದ ನಿಂದನೆಗೈದು ಬೆದರಿಕೆಯೊಡ್ಡಿದ್ದರು.
ಕಾರಿನಲ್ಲಿದ್ದ ಮಹಿಳೆ ತಕ್ಷಣ ಪೊಲೀಸ್ ಕಂಟ್ರೋಲ್ ರೂಮಿಗೆ ಮಾಹಿತಿ ನೀಡಿದ್ದು, ಅದರಂತೆ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಡಿವೈಎಸ್ಪಿ ಅರವಿಂದ ಕಲ್ಲಗುಜ್ಜೆ, ಪೊಲೀಸ್ ವೃತ್ತ ನಿರೀಕ್ಷಕ ನಾಗರಾಜ್, ಎಸ್ಸೈ ಸಂದೀಪ್ ಶೆಟ್ಟಿ ಆಗಮಿಸಿ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತೋಷ್ ನಂದಳಿಕೆ,ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಜಿತ್ ತೆಳ್ಳಾರು ಎಂಬವರನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ಜಾಮೀನು ಮೇರೆಗೆ ಬಿಡುಗಡೆಗೊಳಿಸಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post