ಕುಂದಾಪುರ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಕೆಲವು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರಾದರು.
ಏಕಾಏಕಿ ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದರಿಂದ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾಲೇಜಿಗೆ ಭೇಟಿನೀಡಿ ವಿವಾದ ಬಗೆಹರಿಸಲು ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರು, ಕಾಲೇಜು ಪ್ರಾಂಶುಪಾಲರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರ ಸಭೆ ನಡೆಸಿದರು. ಆದರೆ, ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ.
ಸಬೆಯಲ್ಲಿ ಚರ್ಚೆಯಾಗಿದ್ದು: ‘ವಿದ್ಯಾರ್ಥಿನಿಯರು ಹಿಂದಿನಿಂದಲೂ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತಿದ್ದಾರೆ. ಆಗ ಹಿಜಾಬ್ ಧರಿಸಲು ಯಾರೂ ವಿರೋಧಿಸಿರಲಿಲ್ಲ. ಈಗ ಏಕಾಏಕಿ ವಿರೋಧಿಸುತ್ತಿರುವುದು ಸರಿಯಲ್ಲ’ ಎಂದು ಪೋಷಕರು ಆಕ್ಷೇಪ ವ್ಯಕ್ತಪಡಿಸಿದರು.
‘ದಾಖಲಾತಿಯ ಸಂದರ್ಭ ಬುರ್ಖಾ ಧರಿಸಿ ತರಗತಿಗೆ ಹಾಜರಾಗುವಂತಿಲ್ಲ, ಸ್ಕಾರ್ಫ್ ಧರಿಸಬಹುದು ಎಂಬ ನಿಯಮ ಹಾಕಲಾಗಿತ್ತು. ಅದರಂತೆ ಮಕ್ಕಳು ಬುರ್ಖಾ ಹಾಕದೆ, ಮುಸ್ಲಿಂ ಸಂಪ್ರದಾಯದಂತೆ ಹಿಜಾಬ್ ಧರಿಸುತ್ತಿದ್ದಾರೆ. ಈಗ, ದಿಢೀರ್ ಹಿಜಾಬ್ ಧರಿಸುವಂತಿಲ್ಲ ಎಂಬ ನಿಯಮ ಹೇರುವುದು ಖಂಡನೀಯ’ ಎಂದರು.
ಈಚೆಗೆ ಸರ್ಕಾರ ರಾಜ್ಯದ ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ವಸ್ತ್ರ ಹಾಗೂ ಸಮವಸ್ತ್ರ ಸಂಹಿತೆ ಜಾರಿಗೊಳಿಸುವ ಸಂಬಂಧ ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಿದೆ. ಸಮಿತಿ ವರದಿ ಸಲ್ಲಿಸುವವರೆಗೂ ಸರ್ಕಾರದ ಆದೇಶ ಪಾಲಿಸಬೇಕು ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರ ಮನವೊಲಿಸಲು ಯತ್ನಿಸಿದರು. ಆದರೆ, ಪ್ರಯೋಜನವಾಗಲಿಲ್ಲ. ಸಭೆಯ ನಡುವೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ದೂರವಾಣಿ ಕರೆ ಮಾಡಿ ಪರಿಸ್ಥಿತಿ ವಿವರಿಸಿ ಕೆಲಹೊತ್ತು ಚರ್ಚೆಯನ್ನೂ ನಡೆಸಿದರು.
ವಿದ್ಯಾರ್ಥಿಗಳು ಗುರುವಾರದಿಂದ ಸಮವಸ್ತ್ರ ಮಾತ್ರ ಧರಿಸಿ ಕಾಲೇಜಿಗೆ ಬರಬೇಕು. ನಿಯಮ ಉಲ್ಲಂಘಿಸಿ ಬಂದರೆ ಕಾಲೇಜು ಆವರಣದೊಳಗೆ ವಿದ್ಯಾರ್ಥಿಗಳಿಗೆ ಪ್ರವೇಶಿಸುವುದಿಲ್ಲ ಎಂಬ ನಿರ್ಣಯವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಉಡುಪಿಯಲ್ಲಿ ಆರಂಭವಾದ ವಿವಾದ:
ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಒಂದು ತಿಂಗಳಿನಿಂದ 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನಿಡಬೇಕು ಎಂದು ಒತ್ತಾಯಿಸಿ ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಲೇಜು ಅಭಿವೃದ್ಧಿ ಸಮಿತಿ ಹಲವು ಸುತ್ತಿನ ಸಭೆ ನಡೆಸಿದರೂ ಪ್ರಯೋಜನವಾಗಿಲ್ಲ. ಹಿಜಾಬ್ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಹಿಜಾಬ್ ವಿವಾದ ಉಡುಪಿಯಿಂದ ಕುಂದಾಪುರಕ್ಕೂ ವ್ಯಾಪಿಸಿದೆ.
Discover more from Coastal Times Kannada
Subscribe to get the latest posts sent to your email.
Discussion about this post