ಬೆಂಗಳೂರು: ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗುವುದಕ್ಕೆ ಅಡ್ಡಿಪಡಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.
ವಿದ್ಯಾರ್ಥಿನಿಯರಾದ ಆಯೇಷಾ ಹಜೀರಾ ಅಲ್ಮಾಸ್ ಮತ್ತಿತರರು ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.
ಮನವಿಯಲ್ಲಿ ಪ್ರತಿವಾದಿಗಳಾಗಿ ಹೆಸರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜಿನ ಉಪ ನಿರ್ದೇಶಕರು, ಉಡುಪಿ ಜಿಲ್ಲಾಧಿಕಾರಿ, ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಿಗೆ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.
ಉಡುಪಿ ಶಾಸಕ ರಘುಪತಿ ಭಟ್ ಅವರು ಕಾನೂನುಬಾಹಿರವಾಗಿ ಕಾಲೇಜಿನ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. ಅವರನ್ನೂ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿಸಲಾಗಿದೆ. ಪ್ರಾಂಶುಪಾಲ, ಉಪ ಪ್ರಾಂಶುಪಾಲ ಮತ್ತು ಪ್ರಾಧ್ಯಾಪಕರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.
ಈ ಮಧ್ಯೆ ಉಡುಪಿ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಅವರು ಪ್ರತ್ಯೇಕವಾಗಿ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. ಅಡ್ವೊಕೇಟ್ ಜನರಲ್ ಅವರು ಪ್ರಕರಣದ ಸಂಬಂಧ ವಾದಿಸಲು ಬಯಸಿದ್ದಾರೆ. ಏರಡೂ ಪ್ರಕರಣಗಳನ್ನು ಒಟ್ಟಾಗಿ ಆಲಿಸಲಾಗುವುದು ಎಂದು ಪೀಠ ಹೇಳಿ ವಿಚಾರಣೆ ಮುಂದೂಡಿತು.
Discover more from Coastal Times Kannada
Subscribe to get the latest posts sent to your email.
Discussion about this post