ಮಂಗಳೂರು: ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 6ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಮತ್ತು ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಪ್ರವಾಸಿಗರು, ಸಾರ್ವಜನಿಕರು ಕಡಲತೀರಕ್ಕೆ ಹೋಗಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1 0 7 7 ಹಾಗೂ ದೂರವಾಣಿ: 0824 – 2 4 4 2 5 9 0 ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Discussion about this post