ಸುಳ್ಯ : ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇಂದು ಬೆಳಿಗ್ಗೆ ಮೂವರನ್ನು ಎನ್ಐಎ(ರಾಷ್ಟ್ರೀಯ ತನಿಖಾ ದಳ) ಬಂಧಿಸಿದೆ. ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಹಾಗೂ ಸುಳ್ಯದ ಇಬ್ರಾಹಿಂ ಶಾ ಅವರ ಬೆಳ್ಳಾರೆಯ ಮನೆ ಮೇಲೆ ಇಂದು ಬೆಳಗಿನ ಜಾವ 3 ಗಂಟೆ ಹೊತ್ತಿಗೆ ದಾಳಿ ಮಾಡಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು ಪೊಲೀಸರ ಸಹಕಾರದೊಂದಿಗೆ ಶಾಫಿ ಬೆಳ್ಳಾರೆಯನ್ನು ಬಂಧನ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇಕ್ಬಾಲ್ ಬೆಳ್ಳಾರೆ ಹಾಗೂ ಇಬ್ರಾಹಿಂ ಷಾರನ್ನು ಎನ್‌ಐಎ ಅಧಿಕಾರಗಳ ತಂಡವು ಪುತ್ತೂರಿಗೆ ಕರೆತಂದಿದೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆ ಪೂರ್ಣವಾದ ಬಳಿಕ ಬೆಂಗಳೂರಿಗೆ ಕರೆತರಲಾಗಿದೆ.
ಮೂರು ತಿಂಗಳ ಹಿಂದೆ ನಡೆದಿದ್ದ ಕೊಲೆ : ಜುಲೈ ೨೬ರಂದು ಪ್ರವೀಣ್ ನೆಟ್ಟಾರು ಹತ್ಯೆಯಾಗಿತ್ತು. ಕೇರಳ ರಿಜಿಸ್ಟ್ರೇಷನ್ ಹೊಂದಿರುವ ಬೈಕ್‌ವೊಂದರಲ್ಲಿ ಬಂದ ಮೂವರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕೊಲೆ ಸಂಬಂಧ ವ್ಯಾಪಕ ಪ್ರತಿಭಟನೆ, ಆಕ್ರೋಶ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರಕರಣವನ್ನು ಎನ್‌ಐಎಗೆ ವಹಿಸಿತ್ತು. ಈಗಾಗಲೇ ಈ ಪ್ರಕರಣದಲ್ಲಿ ಹಲವರ ಬಂಧನವಾಗಿದ್ದು, ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಂಧಿತರಿಂದ ದೊರೆತ ಮಾಹಿತಿಯನ್ನಾಧರಿಸಿ ಮತ್ತೂ ಕೆಲವರ ಬಂಧನ ಪ್ರಕ್ರಿಯೆ ನಡೆದಿದೆ.
ಈಗಾಗಲೇ ಎನ್ಐಎ ತಂಡ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ನಾಪತ್ತೆಯಾದ ನಾಲ್ಕು ಜನ ಆರೋಪಿಗಳ ಬಂಧನಕ್ಕೆ ಸಹಕರಿಸುವವರಿಗೆ ಬಹುಮಾನವನ್ನು ಘೋಷಣೆ ಮಾಡಿದೆ.
Discover more from Coastal Times Kannada
Subscribe to get the latest posts sent to your email.
Discussion about this post