ಬೆಂಗಳೂರು: ಇದೇ ಪ್ರಥಮ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ ಕನಿಷ್ಠ 3ರಿಂದ 5 ಲಕ್ಷ ಜನರು ಬರುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಂಬಳಕ್ಕೆ ಸರ್ಕಾರದ ವತಿಯಿಂದ ಒಂದು ಲಕ್ಷ ರೂಪಾಯಿ ಘೋಷಣೆ ಮಾಡಿದ್ದಾರೆ ಎಂದು ಬೆಂಗಳೂರು ಕಂಬಳ ಸಮಿತಿ (ರಿ.) ಗೌರವಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹೇಳಿದರು.
ನ. 25, 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಶನಿವಾರ ಸಂಜೆ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ-ಭಾಷಾ ಸಂಘಟನೆಗಳ ಜತೆ ನಡೆದ ಬೃಹತ್ ಸಮಾಲೋಚನಾ ಸಭೆ ಬಳಿಕ ಆಯೋಜಿಸಿದ ಬಹಿರಂಗ ಸಮಾವೇಶದಲ್ಲಿ ಕೆ. ಪ್ರಕಾಶ್ ಶೆಟ್ಟಿ ಈ ವಿಷಯ ತಿಳಿಸಿದರು. ಇದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಇಂದಿನ ಸಮಾಲೋಚನಾ ಸಭೆಯಲ್ಲಿ ಕರಾವಳಿಯ ವಿವಿಧ ಭಾಷೆ-ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ಭಾಗಿಯಾಗಿದ್ದು ಅವರೊಂದಿಗೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ಕೆ. ಪ್ರಕಾಶ್ ಶೆಟ್ಟಿ ಹೇಳಿದರು.
ಇದೀಗ ಕಂಬಳಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ. ಕಂಬಳ ಸಮಿತಿಯವರ ಉತ್ಸಾಹವನ್ನು ಕಂಡ ಸಿಎಂ ಅವರು ಕಂಬಳಕ್ಕೆ ಸರಕಾರದಿಂದ ಒಂದು ಕೋಟಿ ರೂ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದು ಕಂಬಳದ ಮೆರುಗನ್ನು ಹೆಚ್ಚಿಸಿದೆ.
ಕಂಬಳದಲ್ಲಿ ಸುಮಾರು 150 ಕ್ಕೂಮಿಕ್ಕಿ ಜೋಡಿ ಕಂಬಳ ಕೋಣಗಳು ಭಾಗವಹಿಸಲಿದ್ದು ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಕೋಣಗಳನ್ನು ಕರೆದೊಯ್ಯಲಾಗುತ್ತದೆ. ಕಂಬಳ ಕೋಣಗಳಿಗೆ ಬೇಕಾದ ಆಹಾರ ಮತ್ತು ನೀರನ್ನು ಕೂಡಾ ಮಂಗಳೂರಿನಿಂದಲೇ ವ್ಯವಸ್ಥೆ ಮಾಡಲಾಗುತ್ತಿದೆ.
ಸಮಿತಿ ಕಾರ್ಯಾಧ್ಯಕ್ಷ, ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ ಎಂದು ತಿಳಿಸಿದರು. ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ತಿಳಿಸಿದ್ದಾರೆ.
ಬೆಂಗಳೂರು ಕಂಬಳಕ್ಕೆ ಆಭರಣ ಜುವೆಲ್ಲರ್ಸ್ ಅವರು ಶೀರ್ಷಿಕೆ ಪ್ರಾಯೋಜಕರಾಗಿದ್ದು, ಆಭರಣ ಜುವೆಲ್ಲರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್ ಕಾಮತ್, ಬೆಂಗಳೂರು ಕಂಬಳ ಸಮಿತಿ ಗೌರವ ಸಲಹೆಗಾರ ಉಪೇಂದ್ರ ಶೆಟ್ಟಿ ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post