ಉಳ್ಳಾಲ, ಜ.6: ಕನ್ನಡ ಮತ್ತು ತುಳು ಭಾಷೆಯಲ್ಲಿ ಪ್ರಖರ ಪಾಂಡಿತ್ಯ, ಜನಪದ ಸಂಶೋಧನೆಗಾಗಿ ತನ್ನನ್ನು ಸಮರ್ಪಿಸಿಕೊಂಡಿದ್ದ ಕರಾವಳಿ ಕಂಡ ಮೇರು ಸಾಹಿತಿ, ಹಿರಿಯ ವಿದ್ವಾಂಸ, ಯಕ್ಷಗಾನ, ಜಾನಪದ, ಭೂತಾರಾಧನೆ ಕ್ಷೇತ್ರದಲ್ಲಿ ಅಗಾಧ ಸಂಶೋಧನಾ ಸಾಹಿತ್ಯಗಳ ಜನಕ, ನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕೃತಿಗಳನ್ನು ಹೊರತಂದು ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ ಅನನ್ಯ ಸಾಧಕ ಪ್ರೊ. ಅಮೃತ ಸೋಮೇಶ್ವರ(88) ಇನ್ನಿಲ್ಲ. ವಯೋಸಹಜ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಉಳ್ಳಾಲದ ಸೋಮೇಶ್ವರದ ನಿವಾಸ “ಒಲುಮೆ”ಯಲ್ಲಿ ನಿಧನ ಹೊಂದಿದ್ದಾರೆ.
ತುಳುವಿನಲ್ಲಿ ಕವನ ಸಂಗ್ರಹ, ಪಾಡ್ದನ ಸಂಗ್ರಹ, ನಾಟಕ, ಅನುವಾದಿತ ಕಾವ್ಯ, ನೃತ್ಯ ರೂಪಕ, ರೇಡಿಯೋ ರೂಪಕ, ಅನುವಾದಿತ ನಾಟಕ, ತುಳು ಜಾನಪದ ಕುರಿತಾದ ಸಂಶೋಧನೆ, ಸ್ವತಂತ್ರ ಗಾದೆ, ಭಕ್ತಿಗೀತೆ, ಭಾವಗೀತೆಗಳ ಕೃತಿಗಳನ್ನು ರಚಿಸಿದ್ದರು. ಇವರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020 ನೇ ಸಾಲಿನ ’ಗೌರವಶ್ರೀ’ ಪ್ರಶಸ್ತಿ, ಮಣಿಪಾಲ ಅಕಾಡೆಮಿಯ ಮಾಹೆ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಇವರಿಗೆ ಸಂದಿದ್ದವು. ತುಳು ಭಾಷೆ ಹಾಗೂ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ 2016ನೇ ಸಾಲಿನಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಅವರಿಗೆ ಪತ್ನಿ ನರ್ಮದಾ, ಮಕ್ಕಳಾದ ಚೇತನ್ ಸೋಮೇಶ್ವರ, ಜೀವನ್ ಸೋಮೇಶ್ವರ, ಸೊಸೆಯಂದಿರಾದ ರಾಜೇಶ್ವರಿ, ಸತ್ಯ ಜೀವನ್, ಮೊಮ್ಮಕ್ಕಳಾದ ಸೃಜನ್ ಸೋಮೇಶ್ವರ ಹಾಗೂ ಸೃಷ್ಟಿ ಸೋಮೇಶ್ವರ ಇದ್ದಾರೆ. ಸೋಮೇಶ್ವರ ಪುರಸಭೆ ಕಚೇರಿ ಬಳಿಯ ಅವರ ಸ್ವಗೃಹದಲ್ಲಿ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಾನುವಾರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Discover more from Coastal Times Kannada
Subscribe to get the latest posts sent to your email.
Discussion about this post