ಬಂಟ್ವಾಳ : ಮೆಲ್ಕಾರ್ ಫ್ಲೈಓವರ್ ಸಮೀಪ ಕಾರೊಂದರಲ್ಲಿ ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಮೆಲ್ಕಾರ್ ನಲ್ಲಿ ಗುರುವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ.
ಜೂನ್ 4ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ತಂಡವು ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದ ಕಾರೊಂದನ್ನು ತಡೆದು ಪರಿಶೀಲನೆ ನಡೆಸಿತು. ಈ ವೇಳೆ ಕಾರಿನೊಳಗೆ ಮಾದಕ ವಸ್ತು ಸೇವನೆಗೆ ಬಳಸುವ ಸಾಧನ ಪತ್ತೆಯಾಗಿದ್ದು, ಪ್ರಯಾಣಿಕರನ್ನು ವಿಚಾರಣೆಗೊಳಪಡಿಸಲಾಯಿತು. ವಿಚಾರಣೆಯಲ್ಲಿ ಆರೋಪಿಗಳು ಬಂಟ್ವಾಳ ಪುದು ನಿವಾಸಿ ಎ. ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಅಲಿಯಾಸ್ ಮಾರಿಮುತ್ತು ಎಂದು ಗುರುತಿಸಲಾಗಿದೆ. ಆರೋಪಿಗಳು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಎಂಡಿಎಂಎ ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಪಾಸಣೆ ವೇಳೆ ಆರೋಪಿಗಳ ಬಳಿಯಿಂದ ಹಾಗೂ ಕಾರಿನೊಳಗಿಂದ ಅಂದಾಜು ₹7,64,000 ಮೌಲ್ಯದ 76 ಗ್ರಾಂ 40 ಮಿಲಿಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದೆ. ಅಲ್ಲದೆ ಮಾದಕ ವಸ್ತು ಸೇವನೆಗೆ ಬಳಸುವ ಸಾಧನಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಜೊತೆಗೆ ಆರೋಪಿಗಳ ಬಳಿಯಿದ್ದ ಮೂರು ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ KA-19 MR-1997 ನೋಂದಣಿ ಸಂಖ್ಯೆಯ ಕಾರನ್ನು ಜಪ್ತಿ ಮಾಡಲಾಗಿದೆ.
ಬಂಧಿತ ಆರೋಪಿಗಳ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕಾರಿ ವಸ್ತುಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಎಂಡಿಎಂಎ ಎಲ್ಲಿಂದ ತರಲಾಗಿತ್ತು, ಯಾರಿಗೆ ಮಾರಾಟ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post