ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 164 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಅವುಗಳ ಒಟ್ಟು ಮೌಲ್ಯ ಸುಮಾರು 16,40,000 ರೂ. ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೊಯಿಗೆ ಬಜಾರ್ ಪ್ರಕರಣ- 1 ಬೆಂಗಳೂರು ನಗರದಿಂದ ಎಂಡಿಎಂಎ ಖರೀದಿಸಿ ಮಂಗಳೂರಿಗೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂನ್ 5ರಂದು ದಾಳಿ ನಡೆಸಿ ಪ್ರಣಾಮ್ ಕೋಟ್ಯಾನ್ (30) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 104 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಜಿಪ್‌ಲಾಕ್ ಕವರ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುವಿನ ಮೌಲ್ಯ ಸುಮಾರು 10.40 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಪ್ರಣಾಮ್ ಕೋಟ್ಯಾನ್ ವಿರುದ್ಧ ಈ ಹಿಂದೆ ಹಲ್ಲೆ, ಬೆದರಿಕೆ, ಗಾಂಜಾ ಸೇವನೆ ಹಾಗೂ ಮಾರಾಟ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಮಂಗಳೂರು ದಕ್ಷಿಣ, ಉತ್ತರ ಪೊಲೀಸ್ ಠಾಣೆ ಹಾಗೂ ಅಬಕಾರಿ ಇಲಾಖೆಯಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಪದವಿನಂಗಡಿ ಪ್ರಕರಣ- 2 ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜೂ.5ರಂದು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಮೂಲತಃ ಅರ್ಕುಳ, ವಳಚ್ಚಿಲ್ ನಿವಾಸಿ, ಪ್ರಸಕ್ತ ನಗರದ ಪದವಿನಂಗಡಿಯ ಮುಗರೋಡಿ ನಿವಾಸಿ ಧನರಾಜ್ ಪೂಜಾರಿ ಯಾನೆ ಧನು ವಳಚಿಲ್(33) ಬಂಧಿತ ಆರೋಪಿ. ಈತನಿಂದ ಸುಮಾರು 6,00,000 ರೂ. ಮೌಲ್ಯದ 60 ಗ್ರಾಂ ಎಂಡಿಎಂಎ ಹಾಗೂ ಜಿಪ್-ಲಾಕ್ ಕವರ್ಗಳು, ಒಂದು ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ.
ಧನರಾಜ್ ಪೂಜಾರಿ ವಿರುದ್ಧ ಮಂಗಳೂರು ದಕ್ಷಿಣ, ಉತ್ತರ, ಸುರತ್ಕಲ್, ಬರ್ಕೆ, ಕಾವೂರು, ಕಂಕನಾಡಿ ನಗರ ಹಾಗೂ ಬಂಟ್ವಾಳ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಹಲ್ಲೆ ಹಾಗೂ ಬೆದರಿಕೆ ಸೇರಿದಂತೆ ಸುಮಾರು 12 ಪ್ರಕರಣಗಳು ದಾಖಲಾಗಿವೆ. 2016ರಲ್ಲಿ ದಾಖಲಾಗಿದ್ದ ಗಂಭೀರ ಹಲ್ಲೆ ಪ್ರಕರಣದಲ್ಲಿ ಆತನಿಗೆ 3 ವರ್ಷಗಳ ಜೈಲು ಶಿಕ್ಷೆ ಕೂಡ ವಿಧಿಸಲಾಗಿತ್ತು.
Discover more from Coastal Times Kannada
Subscribe to get the latest posts sent to your email.








Discussion about this post