ಬೆಂಗಳೂರು: ಅಪಹರಣಕ್ಕೊಳಗಾಗಿದ್ದ ಆರು ವರ್ಷದ ಬಾಲಕಿ ಶವವಾಗಿ ಪತ್ತೆಯಾದ ಘಟನೆ ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಪಶ್ಚಿಮ ಬಂಗಾಳ ಮೂಲದ ಷಹನಾಜ್ ಖಾತುಂ ಹತ್ಯೆಯಾದ ಬಾಲಕಿ. ಪ್ಲಾಸ್ಟಿಕ್ ರೋಪ್ ಬಳಸಿ ಉಸಿರುಗಟ್ಟಿಸಿ ಹತ್ಯೆಯಾದ ಸ್ಥಿತಿಯಲ್ಲಿ ನಲ್ಲೂರುಹಳ್ಳಿ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಪೋಷಕರು ವಾಸವಿದ್ದ ಪ್ರದೇಶದಲ್ಲಿಯೇ ನೆಲೆಸಿದ್ದ ಕುಟುಂಬದ ವ್ಯಕ್ತಿಯೊಬ್ಬರ ವಿರುದ್ಧ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ ಹುಡುಕಾಟ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಬಾಲಕಿ ಪೋಷಕರು ನಲ್ಲೂರುಹಳ್ಳಿ ಬಳಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದರು. ಅವರೊಂದಿಗೆ ವಾಸವಿದ್ದ ಪಶ್ಚಿಮ ಬಂಗಾಳ ಮೂಲದ ಮತ್ತೊಂದು ಕುಟುಂಬ ಹಾಗೂ ಬಾಲಕಿಯ ತಾಯಿಯ ನಡುವೆ ಇತ್ತೀಚಿಗೆ ಜಗಳವಾಗಿತ್ತು. ಈ ನಡುವೆ ಜನವರಿ 5ರಂದು ಬೆಳಗ್ಗೆ ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ನಾಪತ್ತೆಯಾಗಿದ್ದಳು.
ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದ್ದ ಪೋಷಕರು, ಜನವರಿ 6ರಂದು ಮಧ್ಯಾಹ್ನ ವೈಟ್‌ಫೀಲ್ಡ್ ಠಾಣೆಗೆ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. ತಡರಾತ್ರಿ ನಲ್ಲೂರುಹಳ್ಳಿಯ ದೇವಸ್ಥಾನದ ರಸ್ತೆಯಲ್ಲಿ ಪ್ಲ್ಯಾಸ್ಟಿಕ್ ಚೀಲದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಮೃತದೇಹವದ ಮರಣೋತ್ತರ ಪರೀಕ್ಷೆಗಾಗಿ ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತದೇಹದಲ್ಲಿ ಬೇರೆ ಯಾವುದೇ ಗಾಯಗಳು ಕಂಡು ಬಂದಿಲ್ಲ. ಪ್ಲ್ಯಾಸ್ಟಿಕ್ ರೋಪ್ ಬಳಸಿ ಉಸಿರುಗಟ್ಟಿಸಿ ಹತ್ಯೆಗೈದಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನ ರಚಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.

Discover more from Coastal Times Kannada
Subscribe to get the latest posts sent to your email.








Discussion about this post