ಮಂಗಳೂರು: ದ.ಕ.ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಮತ್ತು ನದಿ ತೀರದಲ್ಲಿ ಮಳೆಯಿಂದ ಆಗುವ ಹಾನಿಯನ್ನು ಕಡಿಮೆ ಮಾಡಲು ಸಮನ್ವಯತೆಯಿಂದ ಕೆಲಸ ಮಾಡುವಂತೆ ಎಲ್ಲಾ ಇಲಾಖೆಯ ಅಧಿಕಾರಿಗಳಿಗೆ ದಕ್ಷಿಣ ಕನ್ನಡ (ದ.ಕ) ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ರಾತ್ರಿ ಮಂಗಳೂರು ಮಹಾನಗರ ಪಾಲಿಕೆಯ ಕಮಾಂಡ್ ಕಂಟ್ರೋಲ್ ರೂಂ ನಲ್ಲಿ ವ್ಯಾಪಕ ಮಳೆ, ಪ್ರವಾಹ ಹಾಗೂ ಕೈಗೊಂಡಿ ರುವ ಪ್ರವಾಹದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬಂಟ್ವಾಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ಪ್ರಾಣಹಾನಿ ಸಂಭವಿಸಿದಂತೆ ಜಿಲ್ಲೆಯಲ್ಲಿ ಇನ್ನು ಮುಂದೆ ಈ ರೀತಿಯ ಯಾವುದೇ ಪ್ರಕರಣಗಳು ಮರುಕಳಿಸಬಾರದು, ಈ ದಿಸೆಯಲ್ಲಿ ಗುಡ್ಡದ ಸಮೀಪದ ಅಪಾಯಕಾರಿ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಕಾಳಜಿ ಕೇಂದ್ರಗಳು ಅಥವಾ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಇಂದು ಮಳೆಯ ಪ್ರಮಾಣ ಕಡಿಮೆಯಾಗಿದೆ, ಆದರೆ ಗುಡ್ಡ ಕುಸಿತ ಪ್ರಕರಣಗಳು ವರದಿಯಾಗುವ ಸಾಧ್ಯತೆಗಳಿವೆ, ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಬೀಳುವ ಸ್ಥಿತಿ, ಬಿರುಕು ಬಿಟ್ಟ ಸ್ಥಿತಿಗಳಲ್ಲಿರುವ ಸೇತುವೆಗಳನ್ನೊಮ್ಮೆ ಪರಿಶೀಲಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಹಕ ಎಂಜಿನಿಯರ್ ಯಶವಂತ್ ಅವರಿಗೆ ಸೂಚನೆ ನೀಡಿದ ಅವರು, ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಅಧಿಕಾರಿಗಳಿಂದ ಯಾವುದೇ ಲೋಪ ಆಗಬಾರದು, ಆದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು, ಯಾವುದೇ ರೀತಿಯ ಪ್ರಾಕೃತಿಕ ಅನಾಹುತಗಳು ಸಂಭವಿಸಿದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆಗೆ ಸಿದ್ಧವಿರಬೇಕು ಎಂದು ಹೇಳಿದರು.
ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಈ ಬಗ್ಗೆ ಅವರಿಗೆ ಸೂಕ್ತ ಮಾಹಿತಿ ನೀಡಿರಬೇಕು, ಅಧಿಕ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವುದು ಸೇರಿದಂತೆ ಸ್ಥಳೀಯವಾಗಿ ಕೈಗೊಳ್ಳಬೇಕಾದ ಕ್ರಮಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳು ಸೂಕ್ತವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು. ವಿಕೋಪಗಳನ್ನು ಸೂಕ್ತವಾಗಿ ನಿಭಾಯಿಸಲು ತಾಲೂಕು ಮಟ್ಟದಲ್ಲಿ ನಿಯೋಜಿಸಲಾದ ನೋಡಲ್ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕು ಹಾಗೂ ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದರು.
ವಿಧಾನ ಪರಿಷತ್ ಶಾಸಕ ಹರಿಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಅಪರ ಜಿಲ್ಲಾಧಿಕಾರಿ ಮಾಣಿಕ್ಯ, ಸೇರಿದಂತೆ ಲೋಕೋಪಯೋಗಿ, ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post