ಮಂಗಳೂರು: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಹಣದ ಕೊರತೆಯಿಂದ ತುರ್ತು ಚಿಕಿತ್ಸೆ ವಿಳಂಬವಾಗಬಾರದು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಜಾರಿಗೆ ಬಂದಿರುವ ‘ಪಿಎಂ ರಾಹತ್’ (PM-RAHAT) ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲೂ ಗರಿಷ್ಠ 1.5 ಲಕ್ಷ ರೂ.ಗಳವರೆಗೆ ನಗದು ರಹಿತ (Cashless) ಚಿಕಿತ್ಸೆ ದೊರೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
‘ಪಿಎಂ ರಾಹತ್’ ಯೋಜನೆಯ ಪ್ರಮುಖ ಅಂಶಗಳು:
1.5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆ: ಅಪಘಾತ ಸಂಭವಿಸಿದ ದಿನಾಂಕದಿಂದ ಗರಿಷ್ಠ 7 ದಿನಗಳವರೆಗೆ ಪ್ರತಿ ಸಂತ್ರಸ್ತರಿಗೆ 1.5 ಲಕ್ಷ ರೂ.ವರೆಗೆ ಉಚಿತವಾಗಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ದೊರೆಯಲಿದೆ. ರಾಷ್ಟ್ರೀಯ, ರಾಜ್ಯ ಹೆದ್ದಾರಿ ಸೇರಿದಂತೆ ಯಾವುದೇ ರಸ್ತೆಯಲ್ಲಿ ಸಂಭವಿಸುವ ರಸ್ತೆ ಅಪಘಾತದ ಗಾಯಾಳುಗಳಿಗೂ ಈ ಸೌಲಭ್ಯ ಅನ್ವಯವಾಗುತ್ತದೆ, ಅಪಘಾತ ನಡೆದ 24 ಗಂಟೆಗಳ ಒಳಗಾಗಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ, ‘ಪಿಎಂ ರಾಹತ್’ ಅಡಿಯಲ್ಲಿ ಚಿಕಿತ್ಸೆ ಆರಂಭಿಸಿದರೆ ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ,
ಚಿಕಿತ್ಸೆಯ ಪ್ರಕ್ರಿಯೆಯನ್ನು ನೈಜ ಸಮಯದಲ್ಲಿ (Real-time) ಪರಿಶೀಲಿಸಲು ಹಾಗೂ ಪೊಲೀಸ್ ದೃಢೀಕರಣಕ್ಕಾಗಿ eDAR ಮತ್ತು TMS 2.0 ಡಿಜಿಟಲ್ ತಂತ್ರಜ್ಞಾನ ವ್ಯವಸ್ಥೆಯನ್ನು ಜೋಡಿಸಲಾಗಿದೆ. ಈ ಸಂಪೂರ್ಣ ವೆಚ್ಚವನ್ನು ಮೋಟಾರು ವಾಹನ ಅಪಘಾತ ನಿಧಿಯಿಂದ ಭರಿಸಲಾಗುತ್ತದೆ.
ದಕ್ಷಿಣ ಕನ್ನಡದಲ್ಲಿ 172 ಮಂದಿಗೆ ಚಿಕಿತ್ಸೆ – ರಾಜ್ಯದಲ್ಲೇ ಪ್ರಥಮ: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಜುಲೈ 21, 2026ರಿಂದ ಅಗತ್ಯ ತಾಂತ್ರಿಕ ಸೌಲಭ್ಯಗಳನ್ನು ಅಳವಡಿಸಿ ಗಾಯಾಳುಗಳ ಮಾಹಿತಿಯನ್ನು ನಮೂದಿಸಲಾಗುತ್ತಿದೆ. ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯೊಂದರಲ್ಲೇ ಈವರೆಗೆ ಒಟ್ಟು 109 ಗಾಯಾಳುಗಳು ಈ ಯೋಜನೆಯಡಿ ನಗದು ರಹಿತ ಚಿಕಿತ್ಸೆ ಪಡೆದಿದ್ದಾರೆ.
ಮಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಟ್ಟು 172 ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ಒದಗಿಸಲಾಗಿದೆ. ರಸ್ತೆ ಅಪಘಾತದ ಸಂತ್ರಸ್ತರಿಗೆ ಅತೀ ಹೆಚ್ಚು ಸಂಖ್ಯೆಯಲ್ಲಿ ‘ಪಿಎಂ ರಾಹತ್’ ಸೌಲಭ್ಯ ಒದಗಿಸಿಕೊಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯು ಇಡೀ ರಾಜ್ಯದಲ್ಲೇ ಮುಂಚೂಣಿ ಸಾಧಿಸಿದೆ.
ರಸ್ತೆ ಅಪಘಾತ ಸಂಭವಿಸಿದ ತಕ್ಷಣವೇ ಗೋಲ್ಡನ್ ಅವರ್ನಲ್ಲಿ ಹಣದ ಚಿಂತೆ ಮಾಡದೆ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಈ ಯೋಜನೆಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Discover more from Coastal Times Kannada
Subscribe to get the latest posts sent to your email.





Discussion about this post