ಮಂಗಳೂರು: ಪೊಲೀಸರ ಅಧಿಕಾರಿಗಳ ವಿರುದ್ಧ ಯಾವುದೇ ಆರೋಪಕ್ಕೆ ಸರಿಯಾದ ದಾಖಲೆ ಒದಗಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ತಿಳಿಸಿದ್ದಾರೆ.
ನಗರದ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಗುರುವಾರ ರಾತ್ರಿ ದ.ಕ. ಜಿಲ್ಲೆಯ ಅಧೀಕ್ಷಕರ ವ್ಯಾಪ್ತಿಯಲ್ಲಿನ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಯಾರ ಮೇಲೆ ಆರೋಪ ಮಾಡುವುದಿದ್ದರೂ ಅದಕ್ಕೆ ಸರಿಯಾದ ದಾಖಲೆ ಕೊಡಲಿ. ಭ್ರಷ್ಟಾಚಾರ ನಡೆದಿದೆ ಎಂದರೆ ಎಲ್ಲಿ ಹೇಗೆ ಎಂದು ದಾಖಲೆ ಕೊಡಲಿ ಎಂದು ಹೇಳಿದರು.
ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಪತ್ತೆಯಾದ ವೈದ್ಯರ ಮತ್ತು ವೈದ್ಯ ವಿದ್ಯಾರ್ಥಿಗಳ ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಪೊಲೀಸ್ ಅಧಧಿಕಾರಿಗಳಿಂದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸುದ್ದಿಗಾರರು ಗಮನ ಸೆಳೆದಾಗ ಆಧಾರರಹಿತ ಆರೋಪಗಳಿಗೆ ಏನು ಮಾಡಲು ಸಾಧ್ಯವಾಗುವುದಿಲ್ಲ. ಭ್ರಷ್ಟಾಚಾರ ನಡೆದಿದೆ ಎಂದರೆ ಯಾರು ದುಡ್ಡು ತೆಗೆದುಕೊಂಡಿದ್ದಾರೆ ಹೇಳಲಿ? ದಾಖಲೆ ಕೊಡಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಪೊಲೀಸ್ ಆಯುಕ್ತರು ಮತ್ತು ಉಳ್ಳಾಲ ಇನ್ಸ್‌ಪೆಕ್ಟರ್ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿರುವ ಬಗ್ಗೆ ಕೇಳಿದ್ದಕ್ಕೆ, ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡ್ತಾ ಇದೆ. ಅವರು ಯಾವ ನಿರ್ದೇಶನ ನೀಡ್ತಾರೋ, ಆ ಪ್ರಕಾರ ನಾವು ಕ್ರಮ ಕೈಗೊಳ್ಳಲಿದ್ದೇವೆ ಎಂದರು.
ಮಂಗಳೂರಿನ ಎಸ್ಪಿ ಕಚೇರಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಸಾರ್ವಜನಿಕ ಅಹವಾಲು ಸ್ವೀಕರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಸಾರ್ವಜನಿಕರು ದೂರುಗಳನ್ನು ನೀಡಿದ್ದಾರೆ. ಬಂಟ್ವಾಳ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ನಿರ್ಲಕ್ಷ್ಯದ ಬಗ್ಗೆ ಒಬ್ಬರು ದೂರು ನೀಡಿದ್ದಾರೆ. ಠಾಣೆಗೆ ದೂರು ನೀಡಿದ್ರೆ ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ಬರಲು ತಡ ಮಾಡ್ತಾರೆ. ಪೊಲೀಸರು ವಾಹನ ಸಮಸ್ಯೆ ಇದೆ, ವಾಹನ ಸರಿಯಿಲ್ಲ ಎಂದು ಕಾರಣ ನೀಡ್ತಾರೆ ಎಂದು ದಲಿತ ದೌರ್ಜನ್ಯ ಸಮಿತಿ ಅಧ್ಯಕ್ಷ ವಿಶ್ವನಾಥ್ ಆರೋಪ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವರ ದ.ಕ. ಭೇಟಿಯ ಬಂದೋಬಸ್ತ್ ವಿಚಾರದ ಕುರಿತಾಗಿ ಮಂಗಳೂರಿಗೆ ಆಗಮಿಸಿದ್ದೇನೆ. ಚುನಾವಣಾ ಸಮಯದಲ್ಲಿ ಜನರ ಸಮಸ್ಯೆಗಳನ್ನು ಮರೆಯಬಾರದು ಎಂಬ ದೃಷ್ಟಿಯಿಂದ ಸಾರ್ವಜನಿಕರ ಕುಂದು ಕೊರತೆ ಸಭೆಗಳನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು. ಪಶ್ಚಿಮ ವಲಯ ಡಿಐಜಿ ಡಾ.ಚಂದ್ರಗುಪ್ತ, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮ್ಟೆ ವಿಕ್ರಮ್ ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.








Discussion about this post