ಬೆಂಗಳೂರು, ಡಿ10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್‌ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು
ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್‌ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.
ರಾಜಕೀಯ ಜೀವನ: 1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಅವರು ಆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಎನ್ನುವ ಪಕ್ಷಕ್ಕೆ ಸೇರಿದ್ದರು. ಆ ನಂತರ 1967ರ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಎಂಎಂ ಗೌಡ ವಿರುದ್ಧ ಸೋಲನುಭವಿಸಿದ್ದರು. 1968 ರಲ್ಲಿ ಅವರು ರಾಷ್ಟ್ರ ರಾಜಕೀಯ ಅಖಾಡಕ್ಕೆ ಪ್ರವೇಶಿಸಿದ್ದರು. 1968ರ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಗೆಲುವು ಸಾಧಿಸಿ ಕೇಂದ್ರ ರಾಜಕೀಯಕ್ಕೆ ಪ್ರವೇಶ ಪಡೆದರು.
1968 ರ ಉಪಚುನಾವಣೆಯ ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆ ಸಮಯದಲ್ಲಿ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮಾಡಲು ಎಸ್‌ಎಂ ಕೃಷ್ಣ ಅವರ ಪಾತ್ರ ಪ್ರಧಾನವಾಗಿತ್ತು.
1999 ರಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಅವರು ಅದೇ ವರ್ಷ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಪ್ರಮುಖ ಪಾತ್ರವಹಿಸಿದ್ದರು. ಈ ಸಂದರ್ಭದಲ್ಲಿ ಅವರ ನೇತೃತ್ವದಲ್ಲಿ ನಡೆದ ಪಾಂಚಜನ್ಯ ಯಾತ್ರೆ ಕರ್ನಾಟಕ ಕಾಂಗ್ರೆಸ್‌ಗೆ ಹೊಸ ಶಕ್ತಿ ತುಂಬಿತ್ತು.
ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಬಿಜೆಪಿ ಸೇರ್ಪಡೆ : ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್‌ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.
ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು. ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್‌ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post