ಮಂಗಳೂರು, ಸೆ. 11 : ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ನಗರದ ಯೆನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿ ಮಾಡಿದ್ದು, ಆರೋಗ್ಯ ವಿಚಾರಿಸಿದ್ದಾರೆ.
ನಂತರ ಮಾತನಾಡಿದ ಅವರು, “ನಾವಿಬ್ಬರು 1980ರಿಂದ ಆತ್ಮೀಯರಾಗಿದ್ದು, ಅವರ ಆರೋಗ್ಯ ವಿಚಾರಿಸಲೆಂದೇ ನಾನು ಇಂದು ಮಂಗಳೂರಿಗೆ ಭೇಟಿ ನೀಡಿದ್ದು” ಎಂದಿದ್ದಾರೆ.
“ಫೆರ್ನಾಂಡಿಸ್ ಅವರ ಪತ್ನಿ ಸೇರಿದಂತೆ ಅವರ ಕುಟುಂಬದ ಸದಸ್ಯರು, ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ನಾನು ಮಾತನಾಡಿದ್ದೇನೆ” ಎಂದು ತಿಳಿಸಿದ್ದಾರೆ.
“ಕೊಂಕಣ ರೈಲ್ವೆ ಪ್ರಾರಂಭಕ್ಕಾಗಿ ಜಿಲ್ಲೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ವೇಳೆ ಫರ್ನಾಂಡಿಸ್ ಅವರು ಹಳ್ಳಿ ಹಳ್ಳಿಗಳಿಗೆ ಸುತ್ತಿ ರೈತರ ಮನವೊಲಿಸಿ ಭೂಸ್ವಾಧೀನ ಪ್ರಕ್ರಿಯೆಗೆ ಸಹಕಾರ ನೀಡಿದ್ದರು” ಎಂದು ಹೇಳಿದ್ದಾರೆ.
ಈ ಸಂದರ್ಭ ಕಾಂಗ್ರೆಸ್ ಮುಖಂಡ ಬಿ.ರಮಾನಾಥ ರೈ, ಶಾಸಕ ಯು.ಟಿ ಖಾದರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Discussion about this post