ಉಳ್ಳಾಲ: ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿ ಇನ್‌ಸ್ಪೆಕ್ಟರ್ ಕಚೇರಿಯಲ್ಲಿ ಮಾತುಕತೆ ನಡೆಸುತ್ತಿದ್ದ ಸಂದರ್ಭ ಠಾಣಾಧಿಕಾರಿಯ ಎದುರೇ ಹಿಂದೂ ಮುಖಂಡನಿಗೆ ಹಲ್ಲೆ ನಡೆಸಿ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಆರೋಪಿ ಆಸೀಫ್ ಕಾರಿಗೆ ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದ ಎಂಟು ಮಂದಿ ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಕೆ.ಸಿ.ರೋಡ್ ಬಳಿಯ ಜಿಯೋ ಪೆಟ್ರೋಲ್ ಬಂಕ್ ಬಳಿ ನಡೆದಿದ್ದು, ಘಟನೆ ನಡೆದು ಮೂರು ದಿನಗಳ ಬಳಿಕ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇಡ್ಯ ಈಶ್ವರ ನಗರದ ಅಣ್ಣಪ್ಪ ಸ್ವಾಮಿ ಯಾನೆ ಮನು (24), ಪಡೀಲ್ ನಾರ್ಲದ ಸಚಿನ್ (24), ಪಜೀರ್ ಪಾದಲ್ ಕೋಡಿಯ ಕುಶಿತ್(18) ಮತ್ತು ಕಾನೂನಿನೊಂದಿಗೆ ಸಂಘರ್ಷಕ್ಕೆ ಒಳಗಾದ ಬಾಲಕನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಎಲ್ಲರ ಕೈಯಲ್ಲೂ ಮೊಟ್ಟೆ ಹಾಗೂ ತಲವಾರುಗಳಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಒಂದು ಬೈಕಿನಲ್ಲಿದ್ದವರು ಕಾರಿಗೆ ತಲವಾರು ಬೀಸಿದ್ದಾರೆ. ಗಾಜಿಗೆ ಹಾನಿಯಾಗಿದೆ. ಬೈಕುಗಳಲ್ಲಿದ್ದವರು ಹಿಂಬಾಲಿಸಲು ಆರಂಭಿಸಿದಾಗ ರಕ್ಷಣೆಗಾಗಿ ಕಾರಿನಲ್ಲೇ ಮಂಜೇಶ್ವರ ಪೊಲೀಸ್ ಠಾಣೆಗೆ ತೆರಳಿ ರಕ್ಷಣೆ ಕೋರಿದ್ದೆ. ಪೊಲೀಸರು ಘಟನೆ ನಡೆದ ಠಾಣಾ ವ್ಯಾಪ್ತಿಯಲ್ಲಿ ದೂರು ನೀಡಲು ತಿಳಿಸಿದ್ದರಿಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಂಗಳೂರು ದಕ್ಷಿಣ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ಧನ್ಯ.ಎನ್.ನಾಯಕ್ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ. ಎಚ್.ಎನ್ ನೇತೃತ್ವದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಪ್ರಕರಣದ ಆರೋಪಿಗಳನ್ನು ನ.11ರಂದು ರಾತ್ರಿ 8 ಗಂಟೆಗೆ ದಸ್ತಗಿರಿ ಮಾಡಲಾಗಿರುತ್ತದೆ. ತನಿಖೆ ಪ್ರಗತಿಯಲ್ಲಿರುತ್ತದೆ ಎಂದು ನಗರ ಪೊಲೀಸ್ ಆಯುಕ್ತರ ಕಚೇರಿಯ ಪ್ರಕಟನೆ ತಿಳಿಸಿದೆ.
Discover more from Coastal Times Kannada
Subscribe to get the latest posts sent to your email.
Discussion about this post