ಪಡುಬಿದ್ರಿ: ಗೋವಾ ರಾಜ್ಯದಿಂದ ಯಾವುದೇ ಪರವಾನಗಿ ಇಲ್ಲದೆ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಬುಧವಾರ (ನ 11) ಹೆಜಮಾಡಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಮದ್ಯ ಸಾಗಾಟಕ್ಕೆ ಬಳಸಿದ್ದ ವಾಹನ ಹಾಗೂ ಎಸ್ಕಾರ್ಟ್ ಮಾಡುತ್ತಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಕಾರವಾರದ ಕಿನ್ನಾರ ಗ್ರಾಮದ ವಿನಯ್ (47), ಕಾರವಾರ ನಂದಗಡದ ಗಜಾನನ ನಾಯ್ಕ್ (45), ಕಾರವಾರದ ಅಮದಹಳ್ಳಿಯ ಸುಜಿತ್ ತಾಳೆಕೆರೆ (25), ಕಾರವಾರ ಶಿರ್ವಾಡ ಗ್ರಾಮದ ಲಾರೆನ್ಸ್ ಥಾಮಸ್ ಮೆಂಡೋನ್ಸ್ (49) ಬಂಧಿತ ಆರೋಪಿಗಳು
ಬಂಧಿತರಿಂದ 14,35,000 ರೂ. ಮೌಲ್ಯದ 2583 ಲೀಟರ್ ಮದ್ಯದ ಬಾಕ್ಸ್, 5 ಲಕ್ಷ ರೂ. ಮೌಲ್ಯದ ಮಹೀಂದ್ರಾ ಪಿಕ್ ಇನ್ಸುಲೇಟರ್ ವಾಹನ ಹಾಗೂ 3 ಲಕ್ಷ ರೂ. ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 22,35,000 ರೂ. ಎಂದು ಅಂದಾಜಿಸಲಾಗಿದೆ.

ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಅಲಿ ಖಚಿತ ಮಾಹಿತಿ ಆಧಾರದಂತೆ ಗೋವಾದಿಂದ ಮಂಗಳೂರಿಗೆ ಪಿಕ್ಅಪ್ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಮದ್ಯದ ಬಾಟಲಿಗಳನ್ನು ಸಾಗಾಟ ಮಾಡುತ್ತಿದ್ದ ಮತ್ತು ಅದಕ್ಕೆ ಕಾರಿನಲ್ಲಿ ಎಸ್ಕಾರ್ಟ್ ಮಾಡುತ್ತಿರುವ ಬಗ್ಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿಗಳ ಪೈಕಿ ವಿನಯ್ ವಿರುದ್ಧ ಈಗಾಗಲೇ ಕಾರವಾರ ಜಿಲ್ಲೆಯ ಚಿತ್ತಾಕುಲ ಪೊಲೀಸ್ ಠಾಣೆ, ಕಾರವಾರ ಗ್ರಾಮಾಂತರ ಹಾಗೂ ಅಬಕಾರಿ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಸದಾನಂದ ನಾಯ್ಕ್ ಅವರ ನಿರ್ದೇಶನದಂತೆ, ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತಾ ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಜ್ಮತ್ ಆಲಿ ಜಿ. ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಪಡುಬಿದ್ರೆ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್ಐ ಶಕ್ತಿ ವೇಲು, ತನಿಖಾ ವಿಭಾಗದ ಪಿಎಸ್ಐ ಅನಿಲ್ಕುಮಾರ್ ಟಿ. ನಾಯ್ಕ್, ಅಪರಾಧ ಪತ್ತೆ ತಂಡದ ಎಎಸ್ಐಗಳಾದ ರಾಜೇಶ್ ಹಾಗೂ ಗಿರೀಶ್, ಹೆಡ್ ಕಾನ್ಸ್ಟೆಬಲ್ಗಳಾದ ಕೃಷ್ಣಪ್ರಸಾದ್, ಜೀವನ್, ಸತೀಶ್ ಬೆಳ್ಳ, ಶಿವಾನಂದ ಪೂಜಾರಿ, ಅಶ್ವಿನ್ ಕುಮಾರ್ ಹಾಗೂ ಕಾನ್ಸ್ಟೆಬಲ್ಗಳಾದ ಶರಣ್, ಯಾಸಿನ್ ಖಾಜಿ, ರೆಹಮಾನ್, ರುಕ್ಷ್ಮಿಣಿ ಮತ್ತು ಸಿಡಿಆರ್ ವಿಭಾಗದ ದಿನೇಶ್ ಸೇರಿದಂತೆ ಹಲವು ಸಿಬ್ಬಂದಿ ಭಾಗವಹಿಸಿದ್ದರು.
Discover more from Coastal Times Kannada
Subscribe to get the latest posts sent to your email.





Discussion about this post