ಮಂಗಳೂರು, ಅ.12: ಸಿಎಂ ಬಸವರಾಜ ಬೊಮ್ಮಾಯಿಯವರು ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ ಹಿನ್ನೆಲೆಯಲ್ಲಿ ಅ. 13ರಂದು ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಈ ಕಾರಣದಿಂದ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ಮಾತ್ರವಲ್ಲದೆ, ಅ. 13ರಂದು ಸಂಜೆ 3 ಗಂಟೆಯಿಂದ 7 ಗಂಟೆಯವರೆಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಮಂಗಳೂರು ನಗರ ಡಿಸಿಪಿ ಸಾರ್ವಜನಿಕರು ಹಾಗೂ ಭಕ್ತರು ಸಹಕರಿಸಬೇಕೆಂದು ಹೇಳಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಅವರು 11 ಗಂಟೆಗೆ ಉಡುಪಿಗೆ ತೆರಳಿ, ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಉಡುಪಿಯಿಂದ ಹೊರಟು 5 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವಕ್ಕೆ ಭೇಟಿ ನೀಡಲಿದ್ದಾರೆ.
ಈ ಸಂದರ್ಭ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕರು ಉಪಸ್ಥಿತರಿರುವರು. ಸಂಜೆ 6.55ಕ್ಕೆ ವಿಮಾನ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ ಬುಧವಾರ ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಜೆ ವೇಳೆ ಕ್ಷೇತ್ರಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7ರಿಂದ ಎಂದಿನಂತೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಮುಖ್ಯಮಂತ್ರಿ ಆಗಮಿಸುವ ಹಿನ್ನಲೆಯಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ಹಿರಿಯ ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಕ್ತರು ಸಹಕರಿಸಬೇಕೆಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.