ಮಂಗಳೂರು, ಫೆ.15: ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಹಿಂದೂ ಅವಹೇಳನ ಪ್ರಕರಣ ಸಂಬಂಧ ಬಿಜೆಪಿಯ ಇಬ್ಬರು ಶಾಸಕರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ಹಾಗೂ ಇಬ್ಬರು ಕಾರ್ಪೊರೇಟರ್‌ಗಳು ಮತ್ತು ಇತರ ಹಲವು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಲ್ಲದೆ ಅನಿಲ್ ಜೆರಾಲ್ಡ್ ಲೋಬೋ ಎಂಬುವವರ ದೂರಿನ ಮೇರೆಗೆ VHP ಮುಖಂಡ ಶರಣ್ ಪಂಪ್ವೆಲ್, ಪಾಲಿಕೆ ಸದಸ್ಯ ಸಂದೀಪ್ ಗರೋಡಿ, ಭರತ್ ಕುಮಾರ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 153A, 295A, 505(2), 506, 149ರಡಿ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ A1 ಬಿಜೆಪಿ ಶಾಸಕ ವೇದವ್ಯಾಸ ಕಾಮತ್, A2 ಬಿಜೆಪಿ ಶಾಸಕ ಭರತ್ ಶೆಟ್ಟಿ, A3 ಶರಣ್ ಪಂಪ್ವೆಲ್, A4 ಸಂದೀಪ್ ಗರೋಡಿ, A5 ಭರತ್ ಕುಮಾರ್ ಎಂದು ಹೆಸರು ಉಲ್ಲೇಖಿಸಲಾಗಿದೆ. ಆರೋಪಿಗಳು ಶಾಲೆಯ ಮುಂದೆ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರೆಂದು FIRನಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಶಾಲೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ.
ಶಾಲೆ ಆಡಳಿತ ಮಂಡಳಿ ನಿಯಮ ಉಲ್ಲಂಘಿಸುವಂತೆ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡಿದ್ದಾರೆ. ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಹಿಂದೂ, ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಪ್ರಚೋದಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದ್ದು. ದಕ್ಷಿಣ ಕನ್ನಡ ಜಿಲ್ಲೆ ಶಾಂತಿ, ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿದ್ದರು ಎಂದು ಪಾಂಡೇಶ್ವರ ಠಾಣೆ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾರೆ.ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಿಂದ ಧರ್ಮದ ಅವಹೇಳನ ಆರೋಪ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ವಿರುದ್ದ ಮಾಜಿ ಎಂ.ಎಲ್.ಸಿ ಐವನ್ ಡಿಸೋಜಾ ಕಿಡಿಕಾರಿಕಾರಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post