ಬೆಂಗಳೂರು: ಅಥಣಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಶುಕ್ರವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರಿದರು. ಡಿಕೆ ಶಿವಕುಮಾರ್ ಅವರು ಲಕ್ಷ್ಮಣ ಸವದಿ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಕಾಂಗ್ರೆಸ್ ಸೇರಿದ ಬಳಿಕ ಮಾತನಾಡಿದ ಸವದಿ, ನಾನು ಸೋತರು ನನಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ರು. ಅದನ್ನ ಮರೆತು ಈಗ ಪಕ್ಷ ಬಿಡುತ್ತಿದ್ದಾರೆ ಅಂತಾ ಟೀಕೆ ಮಾಡುತ್ತಿದ್ದಾರೆ. ಆದರೆ ಹೈಕಮಾಂಡ್ ನಾಯಕರು ಒಂದು ವಚನ ಕೊಟ್ಟಿದ್ದರು. ಚುನಾವಣೆಗೆ ಅಥಣಿಯಿಂದ 2023ಕ್ಕೆ ಟಿಕೆಟ್ ನೀಡುತ್ತೇನೆ ಎಂದಿದ್ದರು. ಆದರೆ ಯಾವುದೇ ಮಾಹಿತಿ ಇಲ್ಲದೆ ನನ್ನನ್ನ ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದರು. ಯಾವುದೇ ಜವಾಬ್ದಾರಿಯನ್ನು ನೀಡಲಿಲ್ಲ ಎಂದು ಕಿಡಿಕಾರಿದರು.
‘ಮಾಜಿ ಉಪ ಮುಖ್ಯಮಂತ್ರಿ, ಲಿಂಗಾಯತ ನಾಯಕರಲ್ಲಿ ಒಬ್ಬರಾದ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಅವರನ್ನು ಅತ್ಮೀಯವಾಗಿ ಬರಮಾಡಿಕೊಂಡಿದ್ದೇವೆ. ಸವದಿ ಕಾಂಗ್ರೆಸ್‌ಗೆ ಸೇರಿರುವುದರಿಂದ ಬಿಜೆಪಿ 40ಕ್ಕೂ ಹೆಚ್ಚು ಸ್ಥಾನಗಳನ್ನು ಕೆಳೆದುಕೊಳ್ಳಲಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಶೇ 40 ಪರ್ಸೆಂಟ್ ಸರ್ಕಾರ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ’ ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ವಾಗ್ದಾಳಿ ನಡೆಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post