ಮಂಗಳೂರು: ಸಹಕಾರ ಕ್ಷೇತ್ರದ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರಂಭವನ್ನು ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ನಾಲ್ವರಿಗೆ ಪ್ರತಿಷ್ಠಿತ ಸಹಕಾರಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ‘ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವ ಶಾಂತಿಗಾಗಿ ಸಹಕಾರ ಸಂಸ್ಥೆಗಳು’ ಎಂಬ ಆಶಯದಡಿ ಸಹಕಾರ ಸಪ್ತಾಹ ಆಚರಿಸಲಾಗುವುದು ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸೇರಿದಂತೆ ಉಭಯ ಜಿಲ್ಲೆಗಳ ವಿವಿಧ ಸಹಕಾರಿ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಹಾಗೂ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಉತ್ತಮ ಸಹಕಾರಿ ಸಂಘಗಳಿಗೆ ಪ್ರಶಸ್ತಿ ವಿತರಿಸಲಿದ್ದಾರೆ. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅತ್ಯುತ್ತಮ ಸ್ವಸಹಾಯ ಸಂಘಗಳಿಗೆ ಪುರಸ್ಕಾರ ನೀಡಲಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ವಸ್ತುಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ ಕಾಮತ್ ಸಹಕಾರ ಸಪ್ತಾಹದ ಧ್ವಜಾರೋಹಣ ನೆರವೇರಿಸಲಿದ್ದಾರೆ. ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಸಹಕಾರ ಕ್ಷೇತ್ರದ ನಾಲ್ವರಿಗೆ ರತ್ನ ಗೌರವ ; ಸಹಕಾರ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಜಾಕೆ ಮಾಧವ ಗೌಡ, ಕಲ್ಲಡ್ಕ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಕೊಟ್ಟರಿ, ವಸಂತ್ ಬರ್ನಾಡ್ ಹಾಗೂ ಬೆಳ್ವೆ ಜಯರಾಮ್ ಶೆಟ್ಟಿ ಅವರಿಗೆ ಸಹಕಾರಿ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. 2025-26ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಾಲ್ಕು ಸಹಕಾರಿ ಸಂಘಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯೊಂದಿಗೆ ತಲಾ 5 ಗ್ರಾಂ ಚಿನ್ನದ ಪದಕ, 10 ಸಾವಿರ ರೂ. ನಗದು ಹಾಗೂ ಪಾರಿತೋಷಕ ನೀಡಲಾಗುತ್ತದೆ.
ಇದರೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅತ್ಯುತ್ತಮ ಕೃಷಿ ಪತ್ತಿನ, ಮಹಿಳಾ, ಹೈನುಗಾರಿಕೆ, ಮೀನುಗಾರಿಕೆ, ಕ್ರೆಡಿಟ್ ಹಾಗೂ ಸೌಹಾರ್ದ ಸಹಕಾರಿ ಸಂಘಗಳನ್ನು ಗುರುತಿಸಿ ಗೌರವಿಸಲಾಗುತ್ತದೆ. ಶತಮಾನೋತ್ಸವ ಆಚರಿಸಿದ ಸಹಕಾರಿ ಸಂಘಗಳಿಗೂ ವಿಶೇಷ ಸನ್ಮಾನ ಏರ್ಪಡಿಸಲಾಗಿದೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಸಾವಿರಕ್ಕೂ ಅಧಿಕ ನವೋದಯ ಸ್ವಸಹಾಯ ಗುಂಪುಗಳು ಸಕ್ರಿಯವಾಗಿದ್ದು, ಮಹಿಳೆಯರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅತ್ಯುತ್ತಮ ಸ್ವಸಹಾಯ ಗುಂಪುಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಇದಲ್ಲದೆ ಪತ್ರಿಕಾ ಕ್ಷೇತ್ರದ ಒಬ್ಬ ಸಾಧಕ ಹಾಗೂ ಮೂಡುಬಿದಿರೆ ತರಬೇತಿ ಕೇಂದ್ರದಲ್ಲಿ ಯಾಂಕ್ ವಿಜೇತರಾದ ಇಬ್ಬರನ್ನು ಗುರುತಿಸಿ ಸನ್ಮಾನಿಸಲಾಗುವುದು.
ಸಹಕಾರ ಚಳುವಳಿಯ ಇತಿಹಾಸ, ಸಾಧನೆ ಹಾಗೂ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಅದರ ಕೊಡುಗೆಯನ್ನು ಜನರಿಗೆ ಪರಿಚಯಿಸುವುದರ ಜೊತೆಗೆ ಮುಂದಿನ ದಿನಗಳಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವುದು ಈ ರಾಜ್ಯಮಟ್ಟದ ಸಮಾರಂಭದ ಮುಖ್ಯ ಉದ್ದೇಶವಾಗಿದೆ ಎಂದು ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗೋಪಾಲಕೃಷ್ಣ ಭಟ್, ಜಯರಾಜ್ ಶೆಟ್ಟಿ, ಶಶಿಕುಮಾರ್ ರೈ ಬಲ್ಯೊಟ್ಟು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
Discover more from Coastal Times Kannada
Subscribe to get the latest posts sent to your email.





Discussion about this post