ಪುತ್ತೂರು: ಉಪ್ಪಿನಂಗಡಿ ಠಾಣೆಯ ಎದುರು ಮಂಗಳವಾರ ಸಂಜೆ ಪಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ನಡೆದು ಪೊಲೀಸರು ಮತ್ತು ಪ್ರತಿಭಟನಾಕಾರರು ಗಾಯಗೊಂಡ ಬೆನ್ನಲ್ಲೇ ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
15ರಿಂದ 17ರ ಮಧ್ಯರಾತ್ರಿ 12 ಗಂಟೆವರೆಗೆ ಸೆಕ್ಷನ್ 144ರ ಅನ್ವಯ ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಿಲಾಗಿದೆ ಎಂದು ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಪುತ್ತೂರು ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಚೇರಿ ಸುತ್ತಮುತ್ತ ಗುಂಪು ಸೇರುವುದನ್ನು ನಿಷೇಧಿಸಿದೆ. ಯಾವುದೇ ಆಯುಧ, ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ವಸ್ತುಗಳನ್ನು ಹೊಂದುವುದು ನಿಷೇಧಿಸಿದೆ. ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪುತ್ತೂರು ತಾಲೂಕಾದ್ಯಂತ, ಬೆಳ್ಳಾರೆ, ಸವಣೂರು, ಬೆಳ್ತಂಗಡಿ, ಬಂಟ್ವಾಳ ಮತ್ತು ಸುಳ್ಯ ತಾಲೂಕಿನ ವ್ಯಾಪ್ತಿಯ ಪಿಎಫ್‌ಐ ಕಾರ್ಯಕರು ಠಾಣೆ ಎದುರು ಜಮಾವಣೆಗೊಂಡು ಪ್ರತಿಭಟನೆ ನಡೆಸಿದ್ದು, ಮುಂದೆ ಮತ್ತೆ ಒಂದುಗೂಡುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.