ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥರ ವಿರುದ್ಧ ಮಾಡಲಾದ ಕಟುವಾದ ಟೀಕೆ – ಟಿಪ್ಪಣಿಗಳ ಹಿನ್ನೆಲೆ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರಿಗೆ ತೃತೀಯ ವ್ಯಕ್ತಿಯೊಬ್ಬರ ಮೂಲಕ ವರ್ಗಾವಣೆ ಬೆದರಿಕೆ ಹಾಕಿರುವ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ನಡೆಸಲು ಆದೇಶಿಸಬೇಕು ಎಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ಗೆ ಸಲ್ಲಿಸಲಾಗಿದೆ. ತುಮಕೂರಿನ ನ್ಯಾಯವಾದಿ ರಮೇಶ್.ಎಲ್ ನಾಯಕ್ ಶುಕ್ರವಾರ ಈ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ಇದು ಪಟ್ಟಿಯಾಗಿ ವಿಚಾರಣೆಗೆ ಬರಬೆಕಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ನ್ಯಾಯಮೂರ್ತಿಗಳಿಗೆ ವರ್ಗಾವಣೆ ಬೆದರಿಕೆಯೊಡ್ಡಿದ ಪ್ರಕರಣವನ್ನು ವಿಶೇಷ ತನಿಖಾ ತಂಡದ ತನಿಖೆಗೆ ವಹಿಸುವುದರ ಜೊತೆಗೆ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರಿಗೆ ಸೂಕ್ತ ಭದ್ರತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಕೋರಲಾಗಿದೆ.
ಅರ್ಜಿದಾರರ ಮನವಿ ಏನು?: ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರಿಗೆ ವೈ, ವೈ ಪ್ಲಸ್, ಜಡ್, ಜಡ್ ಪ್ಲಸ್ ಅಥವಾ ಸೂಕ್ತ ಭದ್ರತೆ ಒದಗಿಸಲು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ರೀತಿಯ ವರ್ಗಾವಣೆ ಬೆದರಿಕೆಗಳು ಬಂದಾಗ ನ್ಯಾಯಮೂರ್ತಿಗಳು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲು ಅಡ್ಡಿಯಾಗುತ್ತವೆ. ಇದರಿಂದ, ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಿಸುವ ಹಾಗೂ ನ್ಯಾಯಾಂಗದ ಮೇಲಿನ ಜನರ ವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಭ್ರಷ್ಟಾಚಾರ ಪ್ರಕರಣವೊಂದರ ಆರೋಪಿಯ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರು ಪ್ರಕರಣದಲ್ಲಿ ಎಸಿಬಿಯು ಸಮರ್ಪಕವಾಗಿ ತನಿಖೆ ನಡೆಸಿಲ್ಲ ಎಂದು ಭ್ರಷ್ಟಾಚಾರ ನಿಗ್ರಹದಳ ಮತ್ತು ಎಸಿಬಿಯ ಮುಖ್ಯಸ್ಥರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಇದೇ ಕಾರಣಕ್ಕೆ ತಮಗೆ ಮೂರನೇ ವ್ಯಕ್ತಿ ಮೂಲಕ ವರ್ಗಾವಣೆಯ ಬೆದರಿಕೆ ಒಡ್ಡಲಾಗಿದೆ ಎನ್ನುವ ಸ್ಫೋಟಕ ಮಾಹಿತಿಯನ್ನ ನ್ಯಾಯಮೂರ್ತಿಗಳು ಹೈಕೋರ್ಟ್ ಕಾರ್ಯಕಲಾಪದಲ್ಲಿಯೇ ಬಹಿರಂಗಪಡಿಸಿದ್ದರು. ನಂತರ ವರ್ಗಾವಣೆ ಬೆದರಿಕೆಯ ಬಗ್ಗೆ ಇತ್ತೀಚೆಗೆ ಲಿಖಿತ ಆದೇಶದಲ್ಲಿ ದಾಖಲು ಮಾಡಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post