ಬೆಂಗಳೂರು: ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂಬ ಆದೇಶ ವಾಪಸ್ ಪಡೆಯಲಾಗಿದೆ ಜುಲೈ 15 ರ ತಡರಾತ್ರಿ ಆದೇಶ ವಾಪಸ್ ಪಡೆಯಲಾಗಿದೆ. ರಾತ್ರಿ 2 ಗಂಟೆಗೆ ಮುಖ್ಯಮಂತ್ರಿ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಈ ಮಾಹಿತಿ ನೀಡಲಾಗಿದೆ. ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಕಾರ್ಯನಿರ್ವಹಣೆ ವೇಳೆಯಲ್ಲಿ ಸಾರ್ವಜನಿಕರು ಅನುಮತಿ ಇಲ್ಲದೆ ಫೋಟೊ ತೆಗೆಯುವುದು ಮತ್ತು ವಿಡಿಯೊ ಚಿತ್ರೀಕರಿಸುವುದನ್ನು ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶುಕ್ರವಾರ ಆದೇಶ ಹೊರಡಿಸಿತ್ತು. ‘ಶೇ 40ರ ಲಂಚದ ಆಪಾದನೆಗೆ ಗುರಿಯಾಗಿದ್ದ ಸರ್ಕಾರ, ಭ್ರಷ್ಟಾಚಾರ ಅನಿರ್ಬಂಧಿತವಾಗಿ ನಡೆಯಲು ಅನುಕೂಲ ಮಾಡಿಕೊಡುವುದಕ್ಕಾಗಿ ಈ ನಿಷೇಧ ಹೇರಿದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಸಚಿವಾಲಯದ ಕಚೇರಿಗಳನ್ನು ಬಿಟ್ಟು ಉಳಿದೆಲ್ಲ ಕಚೇರಿಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿತ್ತು. ಕಚೇರಿಯ ಮುಖ್ಯಸ್ಥರು ತಮ್ಮ ವ್ಯಾಪ್ತಿಯ ಕೊಠಡಿಗಳ ಚಲನವಲನಗಳನ್ನು ವೀಕ್ಷಿಸಲು ಕೇಂದ್ರೀಕೃತ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಅದನ್ನು ಇನ್ನಷ್ಟು ಸುಧಾರಣೆ ಮಾಡಬೇಕು ಎಂಬ ಆಗ್ರಹ ಇರುವಾಗಲೇ, ಫೋಟೊ, ವಿಡಿಯೊ ಚಿತ್ರೀಕರಣನ್ನೂ ನಿಷೇಧ ಹೇರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.
ವಿಧಾನಸೌಧ ಮತ್ತು ವಿಕಾಸಸೌಧದಲ್ಲಿನ ಸಚಿವರು ಮತ್ತು ಅಧಿಕಾರಿಗಳ ಕಚೇರಿಗೆ ಮಾಧ್ಯಮ ಪ್ರತಿನಿಧಿಗಳು ಭೇಟಿ ನೀಡುವುದನ್ನು ನಿರ್ಬಂಧಿಸಿ 2021ರ ಜುಲೈ ತಿಂಗಳಲ್ಲಿ ಆದೇಶ ಹೊರಡಿಸಲಾಗಿತ್ತು. ತೀವ್ರ ವಿರೋಧ ವ್ಯಕ್ತವಾದ ಬಳಿಕ ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಹಿಂಪಡೆದಿದ್ದರು. ಈಗ ಕೂಡ ಸರ್ಕಾರಿ ಕಚೇರಿಗಳಲ್ಲಿ ಫೋಟೊ ತೆಗೆಯುವುದು ಮತ್ತು ವಿಡಿಯೊ ಚಿತ್ರೀಕರಣ ನಿಷೇಧಿಸಿರುವು ದಕ್ಕೆ ಸಾರ್ವಜನಿಕ ವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೊಸ ಆದೇಶವನ್ನು ತೀವ್ರವಾಗಿ ವಿರೋಧಿಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಹಿತರಕ್ಷಣೆಗಾಗಿ ಈ ಆದೇಶ ಹೊರಡಿಸಿಲ್ಲ. ಸರ್ಕಾರದಲ್ಲಿನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈ ಕ್ರಮ ಕೈಗೊಂಡಿದೆ’ ಎಂದು ಆರೋಪಿಸಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post