ಮಂಗಳೂರು : 72ನೇ ಅಖಿಲ ಭಾರತ ಸಹಕಾರ ಸಪ್ತಾಹ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆವರಣದಿಂದ ವೈವಿಧ್ಯತೆಯನ್ನೊಳಗೊಂಡ ಆಕರ್ಷಕ ಮೆರವಣಿಗೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರ ಉಪಸ್ಥಿತಿಯಲ್ಲಿ ಬ್ಯಾಂಕಿನ ಆವರಣದಲ್ಲಿ ಉದ್ಘಾಟಿಸಿದರು.



ಸಹಕಾರರಂಗ ದೇಶದ ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡುವ ಮೂಲಕ ಗ್ರಾಮೀಣ ಜನರಿಗೆ ಶಕ್ತಿ ನೀಡಿದೆ. ದೇಶದ ಅಭಿವೃದ್ಧಿಗೆ ಸಹಕಾರರಂಗ ಅಪಾರ ಕೊಡುಗೆ ನೀಡುತ್ತಿದೆ ಎಂದು ಕರ್ನಾಟಕ ರಾಜ್ಯ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಶ್ಲಾಘಿಸಿದರು. ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರವಿವಾರ ಹಮ್ಮಿಕೊಂಡ 72ನೇ ಅಖಿಲ ಭಾರತ ಸಹಕಾರ ಸಪ್ತಾಹ 2025ನ್ನು ಉದ್ಘಾಟಿಸಿ ಮಾತನಾಡಿದವರು. ಗ್ರಾಮೀಣ ಭಾಗದ ಜನರ, ಮಹಿಳೆಯರ ಸ್ವಾವಲಂಬನೆ ಗೆ ದೇಶಾದ್ಯಂತ ವ್ಯಾಪಿಸಿರುವ ಸಹಕಾರ ಸಂಸ್ಥೆಗಳು ಕೊಡುಗೆ ನೀಡಿದೆ. ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ. ಕರಾವಳಿಯಲ್ಲಿ ಮಹಳೆಯರ ಸ್ವಾಭಿಮಾನದ ಬದುಕಿಗೆ ಸಹಕಾರ ಕ್ಷೇತ್ರ ಮಹತ್ವದ ಕೊಡುಗೆ ನೀಡಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳು ಸಾಲ ನೀಡಲು ಹಿಂದೇಟು ಹಾಕಿದ ಸಂದರ್ಭದಲ್ಲಿ ರಾಜೇಂದ್ರ ಕುಮಾರ್ ಅವರ ನೇತೃತ್ವದ ಸಹಕಾರಿ ಬ್ಯಾಂಕ್ ಸಾಲ ನೀಡಿ ಹಲವು ಸಂಸ್ಥೆಗಳ ನಿರ್ಮಾಣಕ್ಕೆ ಕಾರಣರಾಗಿದ್ದಾರೆ. ಈ ಸಹಕಾರ ರಂಗ ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿಗೆ ಇನ್ನಷ್ಟು ಕೊಡುಗೆಯನ್ನು ನೀಡುವಂತಾಗಲಿ ಎಂದು ಶುಭ ಹಾರೈಸಿದರು.

ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸ್ವಾಗತಿಸಿ ಮಾತನಾಡುತ್ತಾ, ಸಹಕಾರ ಬ್ಯಾಂಕ್ ಜಿಲ್ಲೆಯ ಜನರ ಆರ್ಥಿಕ ಅಗತ್ಯಗಳಿಗೆ ಸ್ಪಂದಿಸುತ್ತಾ ಬಂದಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸರಿಸಾಟಿಯಾಗಿ ರೈತರ ಆರ್ಥಿಕ ಅಗತ್ಯ ಗಳಿಗೆ ಶಿಕ್ಷಣ, ಮದುವೆ ಸೇರಿದಂತೆ ತುರ್ತು ಅಗತ್ಯ ಗಳಿಗೆ ಸ್ಪಂದಿಸಿದೆ. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು “ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ಎಂಬ ಧೈಯವಾಕ್ಯದೊಂದಿಗೆ ಈ ಬಾರಿ ಆಚರಿಸಲಾಗುತ್ತಿದೆ. ಸಪ್ತಾಹದ ಆಚರಣೆಯ ಸಂದರ್ಭದಲ್ಲಿ “ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿ ಸುವುದು” ಎಂಬ ವಿಷಯದ ಬಗ್ಗೆ ಕಾರ್ಯಕ್ರಮ ನಡೆಯಲಿದೆ ಎಂದು ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.


ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ ಮಾತನಾಡಿ, ಸಹಕಾರ ರಂಗದ ಮೂಲಕ ಮಹಿಳೆಯರ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು. ಸಹಕಾರ ಸರ್ವರ ಅಭಿವೃದ್ಧಿಗೆ ಪಕ್ಷಾತೀತವಾಗಿ, ಜಾತ್ಯತೀತ ವಾಗಿ ಕಾರ್ಯ ನಿರ್ವಹಿಸಬೇಕಾಗಿದೆ. ಸಹಕಾರ ಕ್ಷೇತ್ರದ ಮೂಲಕ ಅಭಿವೃದ್ಧಿ ಸಾಧಿಸಬೇಕಾಗಿದೆ. ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಸಹಕಾರ ಕ್ಷೇತ್ರ ಉತ್ತಮ ನಾಯಕತ್ವವನ್ನು ನೀಡಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಮಾತನಾಡಿ, ದೇಶದಲ್ಲಿಎಂಟೂವರೆ ಲಕ್ಷ ಸಹಕಾರ ಸಂಘಗಳು ದೇಶ ಕಟ್ಟುವ ಕೆಲಸದಲ್ಲಿ ತೊಡಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದಲ್ಲಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಹಕಾರ ಸಂಘಗಳ ಮೂಲಕ ಸಾಲ ನೀಡಿ ರೈತರನ್ನು ಬೆಂಬಲಿಸಿದೆ. ಸಹಕಾರ ಕ್ಷೇತ್ರದಲ್ಲಿಯೂ ಮಹಿಳಾ ಮೀಸಲಾತಿ ನೀಡುವ ಅಗತ್ಯವಿದೆ ಎಂದರು.


ಸಮಾರಂಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿ ಸೋಜ, ಡಾ.ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಶಾಸಕ ಯಶ್ ಪಾಲ್ ಎ.ಸುವರ್ಣ, ನಬಾರ್ಡ್ ಮುಖ್ಯ ಪ್ರಬಂಧಕ ಡಾ.ಸುರೇಂದ್ರ ಬಾಬು, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಎಸ್ ಸಿಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕ ರಾದ ಐಕಳ ದೇವಿ ಪ್ರಸಾದ್ ಶೆಟ್ಟಿ, ಜಯರಾಜ ರೈ, ಮೋನಪ್ಪ ಶೆಟ್ಟಿ ಎಕ್ಕಾರ್, ಭಾಸ್ಕರ ಎಸ್ ಕೋಟ್ಯಾನ್, ಟಿ.ಜಿ.ರಾಜರಾಮಭಟ್ ಸದಾಶಿವ ಉಳ್ಳಾಲ್, ಶಶಿ ಕುಮಾರ್ ರೈ ಬಾಲ್ಯೋಟ್ಟು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಹಾ ಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್.ನವೀನ್, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಕರ್ನಾಟಕ ಸಹಕಾರ ಸಂಘಗಳ ರಾಜ್ಯ ನಿಬಂಧಕ ಟಿ.ಎಚ್.ಎಂ.ಕುಮಾರ್,ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಸಹಕಾರಿ ಇಲಾಖೆಯ ಉಪ ರಿಜಿಸ್ಟ್ರಾರ್ ರಮೇಶ್ ಮೊದಲಾದ ವರು ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.







Discussion about this post