ಮಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯ ಕಣ ರಂಗೇರಿದೆ. ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕೆ ಇಳಿಸಲು ನಿರ್ಧರಿಸಿದೆ. ಇನ್ನೊಂದು ಸ್ಥಾನವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಕಾಂಗ್ರೆಸ್ ನಿರತವಾಗಿದೆ. ಈ ಮಧ್ಯೆ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಉಭಯ ಪಕ್ಷಗಳಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ದ್ವಿಸದಸ್ಯ ಸ್ಥಾನವನ್ನು ಸದ್ಯ ಬಿಜೆಪಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ನ ಪ್ರತಾಪ್‌ಚಂದ್ರ ಶೆಟ್ಟಿ ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಅವರನ್ನೇ ಕಣಕ್ಕೆ ಇಳಿಸಲು ತೀರ್ಮಾನಿಸಿದ್ದು, ಪ್ರತಾಪ್‌ಚಂದ್ರ ಶೆಟ್ಟಿ ಈ ಬಾರಿ ಸ್ಪರ್ಧಿಯಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ಗೆ ಅಭ್ಯರ್ಥಿಯ ಆಯ್ಕೆ ತಲೆನೋವಾಗಿ ಪರಿಣಮಿಸಿದೆ.
ಎಂ.ಎನ್. ರಾಜೇಂದ್ರಕುಮಾರ್ ಅವರ ಸ್ಪರ್ಧೆಯಿಂದಾಗಿ ಬಿಜೆಪಿ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರದಿಂದ ಹಿಂದೆ ಸರಿದಿದೆ. ಬಿಜೆಪಿಯ ಲೆಕ್ಕಾಚಾರದ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2,136 ಹಾಗೂ ಉಡುಪಿ ಜಿಲ್ಲೆಯ 1,572 ಸೇರಿದಂತೆ 3,708 ಮತಗಳು ಪಕ್ಷಕ್ಕೆ ಬೀಳಲಿವೆ. ಪ್ರಥಮ ಪ್ರಾಶಸ್ತ್ಯದ ಮತಗಳ ಮೇಲೆ ಆಯ್ಕೆಯಾಗಲು 2,200 ಮತಗಳು ಸಾಕು. ಇನ್ನುಳಿದ 1,500 ಮತಗಳನ್ನು ಯಾರಿಗೆ ನೀಡಬೇಕು ಎನ್ನುವ ಗೊಂದಲ ಪಕ್ಷದಲ್ಲಿದ್ದರೆ, ಆ ಎಲ್ಲ ಮತಗಳು ರಾಜೇಂದ್ರಕುಮಾರ್ ಅವರ ಪಾಲಾಗಲಿವೆ ಎನ್ನುವ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿವೆ.
ಕಾಂಗ್ರೆಸ್‌ನಲ್ಲಿ 11 ಆಕಾಂಕ್ಷಿಗಳು: ಕಾಂಗ್ರೆಸ್ ಟಿಕೆಟ್ ಕೋರಿ ಐವನ್ ಡಿಸೋಜ, ಪಿ.ವಿ. ಮೋಹನ್, ಮಂಜುನಾಥ ಭಂಡಾರಿ ಸೇರಿದಂತೆ 11 ಜನರು ಅರ್ಜಿ ಸಲ್ಲಿಸಿದ್ದಾರೆ. ಇವರೆಲ್ಲರನ್ನೂ ಬಿಟ್ಟು, ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಗುತ್ತಿಗೆದಾರ ಯು.ಬಿ. ಶೆಟ್ಟಿ ಅವರು ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ.
Discover more from Coastal Times Kannada
Subscribe to get the latest posts sent to your email.
Discussion about this post