ಮಂಗಳೂರು, ಡಿ.17: ಅನೈತಿಕ ಪೊಲೀಸ್‌ಗಿರಿಗೆ ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ ರಾಜ್ಯದ ಮುಖ್ಯಮಂತ್ರಿಯೇ ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಹೇಳಿಕೆ ನೀಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಳೆದ ಎರಡು ತಿಂಗಳ ಅವಧಿಯಲ್ಲಿ ಮಂಗಳೂರಿನಲ್ಲಿ ಏಳೆಂಟು ಅನೈತಿಕ ಗೂಂಡಾಗಿರಿ ನಡೆದಿರುವ ಬಗ್ಗೆ ಮಾಹಿತಿ ದೊರಕಿದೆ. ಇದನ್ನು ನಾನು ಖಂಡಿಸುತ್ತೇನೆ ಮತ್ತು ಅವರ ವಿರುದ್ಧ ಕಠಿಣವಾದ ಕಾನೂನು ಕ್ರಮ ವಹಿಸಬೇಕು. ಆ ರೀತಿ ಅನೈತಿಕ ಗೂಂಡಾಗಿರಿಗೆ ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ. ಮುಖ್ಯಮಂತ್ರಿಗೆ ಕಾನೂನು ಗೊತ್ತಿದೆಯೋ ಗೊತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಪೊಲೀಸರು ಇರುವುದು. ಸರಕಾರ ಇಂತಹ ಕೃತ್ಯಗಳಿಗೆ ಅವಕಾಶ ನೀಡಬಾರದು. ಆದರೆ ಮುಖ್ಯಮಂತ್ರಿಯೇ ಪ್ರೋತಾಹ ನೀಡುವ ರೀತಿ ಹೇಳಿಕೆ ನೀಡಿದರೆ ಏನಾಗುತ್ತದೆ ಎಂದವರು ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪರ ಮಾತನಾಡಿದ್ದಾರೆ. ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರಿಗೆ ಇಂತಹ ಹೇಳಿಕೆಗಳೇ ಬೇಕಾಗಿರುವುದು. ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅದು ಬಿಟ್ಟು ಭಯೋತ್ಪಾದನೆಗೆ ಸಹಕಾರ ನೀಡುತ್ತೇನೆಂದು ಹೇಳಿದ್ದಾರೆಯೇ..? ಬಿಜೆಪಿಯವರು ಅದನ್ನು ಅನುಕೂಲಕ್ಕೆ ತಕ್ಕಂತೆ ತಿರುಚಿ ಜನಗಳ ಮುಂದೆ ತಪ್ಪು ಮಾಹಿತಿ ನೀಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ದೇಶದಲ್ಲಿ ಭಯೋತ್ಪಾದನೆ ಇದ್ದರೆ ಬಿಜೆಪಿಯವರು ಹತ್ತಿಕ್ಕಲಿ. ಅವರಿಗೆ ಅಧಿಕಾರವಿದೆ, ಡಬಲ್ ಇಂಜಿನ್ ಸರಕಾರವಿದೆ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 9 ವರ್ಷವಾಯಿತ್ತಲ್ಲಾ ಭಯೋತ್ಪಾದನೆಯನ್ನು ಹತ್ತಿಕ್ಕಲಿ. ದೇಶದಲ್ಲಿ ಎಲ್ಲೆಲ್ಲಿ ಉಗ್ರಗಾಮಿ ಚಟುವಟಿಕೆ ನಡೆಯುತ್ತಿದೆಯೋ ಅದನ್ನು ಹತ್ತಿಕ್ಕಲಿ. ಅವರಿಗೆ ಅಧಿಕಾರ ಕೊಟ್ಟದ್ದೇಕೆ ಮತ್ತೆ. ಬರೀ ಜನರನ್ನು ಪ್ರಚೋದಿಸಿ ಭಾವನಾತ್ಮಕ ವಿಚಾರಗಳನ್ನು ಜನರ ಮುಂದೆ ಇಡೋದಕ್ಕಲ್ಲ ಅಧಿಕಾರ ನೀಡೋದಲ್ಲ ಎಂದು ಹೇಳಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post