ಮಂಗಳೂರು: ನಗರ ಪೊಲೀಸ್ ಕಮಿಷನರೇಟ್‌ನ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶವು 2 ತಿಂಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸಾಮರಸ್ಯಕ್ಕೆ ಸಂಬಂಧಿಸಿದಂತೆ ನಗರ, ರಾಜ್ಯ ಹಾಗೂ ದೇಶಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಮುಖ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸುತ್ತಿದೆ.
ಕೋಶದ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ಗುರುತಿಸಿ ಹಾಗೂ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ನೈಪುಣ್ಯತೆಯೊಂದಿಗೆ ಕರ್ತವ್ಯ ನಿರ್ವಹಿಸುವಂತೆ ಪ್ರೋತ್ಸಾಹಿಸಲು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ರೂ.10ಸಾವಿರ ನಗದು ಬಹುಮಾನ ಘೋಷಿಸಿದ್ದಾರೆ.
ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಈ ಘಟಕದ ಸಿಬ್ಬಂದಿಗೆ ಕಾಲಕಾಲಕ್ಕೆ ಸುಧಾರಿತ ತರಬೇತಿ ಹಾಗೂ ಸುಧಾರಿತ ತಂತ್ರಜ್ಞಾನಗಳ ಬಳಕೆಯ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.
ಅಪರಾಧ ಚಟುವಟಿಕೆಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಫೇಸ್‌ಬುಕ್ ಟ್ರೋಲ್ ಪೇಜ್‌ಗಳ ಮೇಲೆ, ಹ್ಯಾಂಡ್ಲರ್‌ಗಳ ಮೇಲೆ ಹಾಗೂ ಇತರ ಪ್ರಮುಖ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಪೇಜ್ ಮತ್ತು ಗ್ರೂಪ್‌ಗಳ ಮೇಲೆ ಸತತ ನಿಗಾ ವಹಿಸಿದೆ. ಇವುಗಳಿಂದ ಉಂಟಾಗಬಹುದಾದ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳು ಉಲ್ಬಣಿಸದಂತೆ ತಡೆಯುವಲ್ಲಿ ಯಶಸ್ವಿಯಾಗಿದೆ. ಮಂಗಳೂರು ನಗರ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶದ ಕಾರ್ಯನಿರ್ವಹಣೆಯನ್ನು ಗುರುತಿಸಿ ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶದಲ್ಲಿ ರಾಜಾ ಎಂ., ಅಕಾಶ್ ನಾಯ್ಕ್, ಸಿದ್ದಪ್ಪ ಕಲ್ಮಡ, ವರ್ಗೀಸ್ ಸ್ಕರಿಯ, ಶರಣಬಸವ, ಸುರೇಶ್ ಕಾರ್ಯನಿರ್ವಹಿಸುತ್ತಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post