ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಲಿ ಯೋಗೀಶನ ಸಹಚರನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಹಿತ ಸೋಮವಾರ ಬಂಧಿಸಿದ್ದಾರೆ. ಬಂಧಿತ ಆರೋಪಿ ಕಾಸರಗೋಡು ಮೂಲದ ಮೊಗ್ರಾಲ್ ನಿವಾಸಿ ಅಬ್ದುಲ್ ಅಸೀರ್ (32) ಎಂಬಾತನಾಗಿದ್ದು, ಈತನಿಗೆ ಸದ್ದು, ಸಾದು, ಮಾಯ ಎಂಬ ಅಡ್ಡ ಹೆಸರೂಗಳೂ ಇದ್ದವು. ಅಬ್ದುಲ್ ಅಸೀರ್ ಕಾಸರಗೋಡಿನಿಂದ ಮಂಗಳೂರು ನಗರಕ್ಕೆ ಬಂದು ನಂತೂರು ಪರಿಸರದಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
5 ಲಕ್ಷ ಮೌಲ್ಯದ 53 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರನಾಗಿದ್ದು, ಈ ಹಿಂದೆ ಪುತ್ತೂರು ನಗರದಲ್ಲಿನ ರಾಜಧಾನಿ ಜ್ಯುವೆಲರ್ಸ್ ಗೆ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ. ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಿಡುಗಡೆಗೊಂಡಿದ್ದ. ಬಳಿಕ ವಿಚಾರಣೆ ಸಮಯ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಈ ಹಿಂದೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಶಾಫೀಕ್ ಕೊ*ಲೆ ಪ್ರಕರಣ, ಪೋಕ್ಸೋ ಪ್ರಕರಣ, ಕಳ್ಳತನ ಪ್ರಕರಣ ಹಾಗೂ ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ದಾಖಲಾಗಿದ್ದು, ವಾರಂಟ್ ಜಾರಿಯಲ್ಲಿತ್ತು.
ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಅವರ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ.ಎಂ, ಪಿಎಸ್ಐ ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಎಎಸ್ಐಗಳಾದ ಮೋಹನ್ ಕೆ.ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post