ಮಂಗಳೂರು: ಪುತ್ತೂರುನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಸದಾನಂದ ಗೌಡ ಅವರ ಚಿತ್ರವಿದ್ದ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣದ ಆರೋಪಿಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪುತ್ತೂರು ಸಂಪ್ಯ ಗ್ರಾಮಾಂತರ ಠಾಣೆಯ ಪಿಎಸ್ಐ ಶ್ರೀನಾಥ ರೆಡ್ಡಿ ಹಾಗೂ ಪೊಲೀಸ್ ಕಾನ್ಸ್ಟೆಬಲ್ ಹರ್ಷಿತ್ ಅವರನ್ನು ಅಮಾನತು ಮಾಡಲಾಗಿದೆ.
ಪುತ್ತೂರಿನ ಡಿವೈಎಸ್ಪಿ ವೀರಯ್ಯ ಹಿರೇಮಠ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಪೊಲೀಸರು ದೌರ್ಜನ್ಯ ನಡೆಸಿರುವ ಕುರಿತು ಆರೋಪಿ ಅವಿನಾಶ್ ತಂದೆ ವೇಣುನಾಥ ಅವರು ದೂರು ನೀಡಿದ್ದರು. ‘ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯವರು ಸಲ್ಲಿಸಿದ ಇಲಾಖಾ ವಿಚಾರಣೆಯ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣೆ ಪಿಎಸ್ಐ ಹಾಗೂ ಕಾನ್ಸ್ಟೆಬಲ್ ಒಬ್ಬರನ್ನು ಸೇವೆಯಿಂದ ಅಮಾನತು ಗೊಳಿಸಲಾಗಿದೆ. ಪುತ್ತೂರು ಡಿವೈಎಸ್ಪಿ ವಿರುದ್ಧ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು’ ಎಂದು ದಕ್ಷಿಣ ಕನ್ನಡ ಜಿಲ್ಲೆ ಯ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ತಿಳಿಸಿಧ್ದಾರೆ.
ಪುತ್ತೂರು ಡಿವೈಎಸ್ಪಿ ಕಚೇರಿಯಲ್ಲೇ ಆರೋಪಿಗಳ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು ಹಾಗಾಗಿ ಈ ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿ ಅವರಿಗೆ ವಹಿಸಲಾಗಿದೆ. ಹಲ್ಲೆಗೊಳಗಾದ ಆರೋಪಿಗಳಲ್ಲಿ ಅವಿನಾಶ್ ಮತ್ತು ಗುರುಪ್ರಸಾದ್ ಎಂಬವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ ಮೋದಿ ಬ್ರಿಗೇಡ್ ನಾಯಕ ಚಕ್ರವರ್ತಿ ಸೂಲಿಬೆಲೆ ಆಸ್ಪತ್ರೆಗೆ ಭೇಟಿ ನೀಡಿದ್ದು, ಮಾನಸಿಕ ಧೈರ್ಯ ತುಂಬಿ ಸಾಂತ್ವನ ಹೇಳಿದ್ಸಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ನರಿಮೊಗ್ರು ನಿವಾಸಿಗಳಾದ ಅಭಿ ಅಲಿಯಾಸ್ ಅವಿನಾಶ್, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್, ವಿಶ್ವನಾಥ್ ಮತ್ತು ಮಾಧವ ಎಂಬ ಒಟ್ಟು 9 ಮಂದಿಯನ್ನು ಪುತ್ತೂರು ಪೇಟೆ ಪೊಲೀಸರು ಸೋಮವಾರ ಮತ್ತು ಮಂಗಳವಾರ ಬಂಧನಕ್ಕೊಳಪಡಿಸಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post