ಕಡಬ : ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‌ನ ಉದ್ಘಾಟನೆ ಹಾಗೂ 2021-22ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜು.9ರಂದು ಮಧ್ಯಾಹ್ನ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟಿಸಿದರು. ಬಳಿಕ ನಡೆದ ಸಮಾರಂಭದ ಅಧ್ಯಕ್ಷತೆ ವಹಿಸಿ, ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಿ ಆಶೀರ್ವಚನ ನೀಡಿದ ಸ್ವಾಮೀಜಿಯವರು, ಗ್ರಾಮೀಣ ಪ್ರದೇಶದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ ಹೆಮ್ಮೆ ತಂದಿದೆ. ಮುಂದಿನ ದಿನದಲ್ಲಿ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳೂ ಸಾಧಕರಾಗಬೇಕೆಂದು ಹೇಳಿದರು. ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಯು ಸುಸಂಸ್ಕೃತ ನಾಗರಿಕರನ್ನು ಸೃಷ್ಟಿಸುವ ದೊಡ್ಡ ಸಂಸ್ಥೆಯಾಗಿ ಬೆಳೆಯಲಿ ಎಂದು ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹಾರೈಸಿದರು.
ಸಚಿವ ಎಸ್.ಅಂಗಾರರವರು ಮಾತನಾಡಿ, ಅಟಲ್ ಟಿಂಕರಿಂಗ್ ಲ್ಯಾಬ್‌ನಿಂದ ಸಿಗುವ ಎಲ್ಲಾ ಪ್ರಯೋಜನಗಳನ್ನು ವಿದ್ಯಾರ್ಥಿಗಳು ಪಡೆದುಕೊಂಡು ದೇಶದ ಅಭಿವೃದ್ಧಿಗೆ ಪೂರಕವಾಗಿರುವ ಸಾಧನೆ ತೋರಬೇಕೆಂದು ಹೇಳಿದ ಅವರು, ರಾಮಕುಂಜದಲ್ಲಿ ಬಿಸಿಎಂ ಹಾಸ್ಟೆಲ್ ಆರಂಭಕ್ಕೆ ಪ್ರಯತ್ನಿಸಲಾಗುವುದು. ರಾಮಕುಂಜ ಪದವಿ ಕಾಲೇಜಿನ ರಂಗಮಂದಿರಕ್ಕೆ ಹಾಗೂ ಪ.ಪೂ.ಕಾಲೇಜಿನಲ್ಲಿ ಸುಸಜ್ಜಿತ ಸಭಾಂಗಣ ನಿರ್ಮಾಣಕ್ಕೆ ಆಡಳಿತ ಮಂಡಳಿಯವರ ಕೋರಿಕೆಯಂತೆ ಅನುದಾನ ನೀಡುವುದಾಗಿ ಹೇಳಿದರು.
ಗೌರವಾರ್ಪಣೆ: ಅಟಲ್ ಟಿಂಕರಿಂಗ್ ಲ್ಯಾಬ್ ಸ್ಥಾಪನೆಗೆ ಸಹಕಾರ ನೀಡಿದ ನವೀನ್, ಮಣಿಕಂಠನ್, ರಿಯಾಜ್ ಬೆಂಗಳೂರು, ಪಿಡಬ್ಲ್ಯುಡಿ ಇಂಜಿನಿಯರ್ ಪ್ರಮೋದ್, ಎಸ್‌ಆರ್‌ಕೆಯ ಕೇಶವ, ಡಾ.ಕನಕರಾಜುರವರಿಗೆ ಸ್ವಾಮೀಜಿ ಗೌರವಾರ್ಪಣೆ ಮಾಡಿದರು. 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಅಟಲ್ ಟಿಂಕರಿಂಗ್ ಲ್ಯಾಬ್‌ನ ಉಸ್ತುವಾರಿ ರಿಯಾಜ್ ಬೆಂಗಳೂರು, ಎಸ್‌ಆರ್‌ಕೆ ಲ್ಯಾಡರ್‍ಸ್‌ನ ಕೇಶವ, ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಪ್ರಶಾಂತ್ ಆರ್.ಕೆ., ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್., ಸಂಚಾಲಕ ಟಿ.ನಾರಾಯಣ ಭಟ್, ಕೋಶಾಧಿಕಾರಿ ಕೆ.ಸೇಸಪ್ಪ ರೈ, ಸದಸ್ಯರಾದ ಲಕ್ಷ್ಮೀನಾರಾಯಣ ರಾವ್ ಆತೂರು, ಮಾಧವ ಆಚಾರ್ ಇಜ್ಜಾವು, ವೇದಿಕೆಯಲ್ಲಿ ಉಪಸ್ಥಿತರಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post