ಮಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮಾತ್ರವಲ್ಲದೆ ಸಮಾಜದ ಎಲ್ಲಾ ವರ್ಗಗಳ ಬಡ ಜನರಿಗೆ ಆಸರೆಯಾಗುವ ನಿಟ್ಟಿನಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಗುರುವಾರ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಭೂ ಒಡೆತನ ಯೋಜನೆಯಡಿಯಲ್ಲಿ ಸ್ವಂತ ಜಮೀನು ಇಲ್ಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಸರ್ಕಾರದಿಂದಲೇ ಭೂಮಿ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೂರಿಲ್ಲದ ನಿರಾಶ್ರಿತರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಇಲಾಖೆ ಕಾರ್ಯೋನ್ಮುಖವಾಗಿದೆ ಎಂದರು.
ಗ್ರಾಮೀಣ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೇಡಿಕೆಗೆ ತಕ್ಕಂತೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ನೂತನ ವಿದ್ಯಾರ್ಥಿನಿಲಯಗಳನ್ನು ಆರಂಭಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದರಿಂದ ಪೋಷಕರಿಂದ ಅಪಾರ ಬೇಡಿಕೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇನ್ನಷ್ಟು ಹೊಸ ವಸತಿ ಶಾಲೆಗಳನ್ನು ಮಂಜೂರು ಮಾಡಲು ಕ್ರಮ ವಹಿಸಲಾಗುವುದು ಎಂದು ಸಚಿವ ಮುನಿಯಪ್ಪ ಇದೇ ವೇಳೆ ತಿಳಿಸಿದರು.
ರಾಜ್ಯಾದ್ಯಂತ ಸುಸಜ್ಜಿತ ಸಮುದಾಯ ಭವನಗಳ ನಿರ್ಮಾಣಕ್ಕೆ ಸರ್ಕಾರ ಭಾರಿ ಮೊತ್ತದ ಅನುದಾನ ಮೀಸಲಿಟ್ಟಿದೆ. ಜಿಲ್ಲಾ ಮಟ್ಟದಲ್ಲಿ ಪ್ರತಿ ಸಮುದಾಯ ಭವನಕ್ಕೆ ರೂಪಾಯಿ 4 ಕೋಟಿ, ತಾಲೂಕು ಮಟ್ಟದಲ್ಲಿ ಪ್ರತಿ ಭವನಕ್ಕೆ 2 ಕೋಟಿ ರೂಪಾಯಿ, ಹೋಬಳಿ ಮಟ್ಟದಲ್ಲಿ ರೂ. 85 ಲಕ್ಷ, ಗ್ರಾಮ ಪಂಚಾಯತ್ ಮಟ್ಟದಲ್ಲಿ ರೂ. 20 ಲಕ್ಷ ಅನುದಾನ ಒದಗಿಸಲಾಗುತ್ತಿದೆ. ಈ ಭವನಗಳ ಜೊತೆಗೆ ಗ್ರಂಥಾಲಯ (ಲೈಬ್ರರಿ) ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನೂ ಕಲ್ಪಿಸಲಾಗುತ್ತಿದೆ ಎಂದು ಅವರು ಹೇಳಿದರು.
Discover more from Coastal Times Kannada
Subscribe to get the latest posts sent to your email.







Discussion about this post