ಬೆಂಗಳೂರು, ನ. 17; ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಶಾಫಿ ಸಾಅದಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಗೆ ವಕ್ಫ್ ಮಂಡಳಿ ಅಧ್ಯಕ್ಷ ಪಟ್ಟ ಸಿಕ್ಕಿದೆ.
ವಕ್ಫ್ ಮಂಡಳಿ ಅಧ್ಯಕ್ಷರಾಗಿದ್ದ ಡಾ.ಮಹಮ್ಮದ್ ಯೂಸುಫ್ ನಿಧನದಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಬುಧವಾರ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಮಂಡಳಿ ಕಚೇರಿಯಲ್ಲಿ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶಾಫಿ ಸಾಅದಿ ಗೆಲುವು ಸಾಧಿಸಿದರು. ಈ ಗೆಲುವಿಗೆ ಬಿಜೆಪಿ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ.
ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ, ಕಾನೂನು ಸಚಿವ ಮಾಧುಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್, ಪಕ್ಷದ ಮುಖಂಡರು ಶಾಫಿ ಸಾಅದಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಚುನಾವಣೆ ನಡೆಯಿತು; ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಮಂಡಳಿ ಕಚೇರಿಯಲ್ಲಿ ಬುಧವಾರ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. 10.30ರ ತನಕ ನಾಮಪತ್ರ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿತ್ತು. ಇಬ್ಬರು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು.
ಹೆಚ್ಚು ಮತಗಳನ್ನು ಪಡೆದ ಶಾಫಿ ಸಾಅದಿ ಗೆಲವು ಸಾಧಿಸಿದರು. ಈ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬಿಜೆಪಿಯ ಅಭ್ಯರ್ಥಿಗೆ ವಕ್ಫ್ ಮಂಡಳಿ ಅಧ್ಯಕ್ಷ ಹುದ್ದೆ ಒಲಿಯಿತು.
ಶಾಫಿ ಸಾಅದಿ ಎರಡು ಬಾರಿ ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಎರಡು ಅವಧಿಗೆ ವಕ್ಫ್ ಮಂಡಳಿ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದರು. ಪ್ರಸ್ತುತ ಶಾಫಿ ಸಾಅದಿ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಚುನಾವಣೆ ವೇಳೆ ಮಾಜಿ ಸಚಿವ ತನ್ವೀರ್ ಸೇಠ್, ರಾಜ್ಯ ಸಭಾಸದಸ್ಯ ನಾಸೀರ್ ಹುಸೇನ್, ಶಾಸಕಿ ಕನೀಝ್ ಫಾತಿಮಾ ಮುಂತಾದವರು ಉಪಸ್ಥಿತರಿದ್ದರು.