ಬೆಂಗಳೂರು: ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸೋಮವಾರ ಕೈಗೊಂಡಿದೆ.
ಇಂದು ವಿಧಾನಸೌಧದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಅವರು, ಉಕ್ರೇನ್ ಹಾಗೂ ರಷ್ಯಾ ನಡುವೆ ನಿರಂತರವಾಗಿ ಯುದ್ಧ ನಡೆಯುತ್ತಿದೆ. ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 700ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಬಗ್ಗೆ ಅವರೊಂದಿಗೆ ಚರ್ಚಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು. ಅದರಂತೆ ಚರ್ಚೆ ನಡೆಸಿದ್ದು, ತಾತ್ಕಾಲಿಕವಾಗಿ ಒಂದು ಅಭಿಪ್ರಾಯಕ್ಕೆ ಬರಲಾಗಿದೆ ಎಂದು ವಿವರಿಸಿದರು.
ಮೊದಲ ವರ್ಷದಿಂದ ಆರಂಭವಾಗಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಇಲ್ಲಿದ್ದಾರೆ. ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳಿವೆ. ಈ ವಿದ್ಯಾರ್ಥಿಗಳು ಈ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗವನ್ನು ಆಯಾ ವರ್ಷದಲ್ಲೇ ಮುಂದುವರಿಸುವಂತೆ ಕ್ರಮ ವಹಿಸಲು ತೀರ್ಮಾನಿಸಲಾಗಿದೆ. ಈಗ ನಡೆಯುತ್ತಿರುವ ತರಬೇತಿಯನ್ನೇ ಮುಂದುವರಿಸಲಾಗುವುದು ಎಂದು ತಿಳಿಸಿದರು.
ಶುಲ್ಕ ಇಲ್ಲ : ಸದ್ಯಕ್ಕೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳುತ್ತಿಲ್ಲ. ಆದರೆ ಅವರ ಕಲಿಕೆ, ತರಬೇತಿಯನ್ನು ಇಲ್ಲಿ ಮುಂದುವರಿಸಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಉಚಿತವಾಗಿಯೇ ಶಿಕ್ಷಣ ಮುಂದುವರಿಸಬಹುದು ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.
ಸಮಿತಿಯಿಂದ ಕೇಂದ್ರ ಸರ್ಕಾರಕ್ಕೆ ಎಲ್ಲ ಬಗೆಯ ಮನವಿಗಳನ್ನು ಸಲ್ಲಿಸಲಾಗುವುದು. ಈ ವಿಚಾರದಲ್ಲಿ ಕೇಂದ್ರ ಸರ್ಕಾರವೇ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.
Discover more from Coastal Times Kannada
Subscribe to get the latest posts sent to your email.
Discussion about this post