ಉಳ್ಳಾಲ: ಕೇರಳದಲ್ಲಿ ಕೋರೊನಾ ರೂಪಾಂತರಿ ಜೆಎನ್ 1 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಕರ್ನಾಟಕ ಗಡಿಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿಯಲ್ಲಿ ಆರೋಗ್ಯ ಇಲಾಖೆ ಮತ್ತು ತಲಪಾಡಿ ಗ್ರಾಮ ಪಂಚಾಯಿತಿ ವತಿಯಿಂದ ಜನ ಜಾಗೃತಿ ಕಾರ್ಯಕ್ರಮವನ್ನು ಗುರುವಾರದಿಂದ ಆರಂಭಿಸಿದೆ.
ಕೋಟೆಕಾರು ಆರೋಗ್ಯಕೇಂದ್ರದ ಆರೋಗ್ಯಾಧಿಕಾರಿ, ಸಮುದಾಯ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಗಡಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಮಾಹಿತಿ ಇರುವ ಬ್ಯಾನರ್ ಅಳವಡಿಸಿ ಜಾಗೃತಿ ಮೂಡಿಸುತ್ತಿದ್ದಾರೆ. ಕೇರಳದಿಂದ ಬರುವ ಪ್ರಯಾಣಿಕರಿಗೆ ಧ್ವನಿವರ್ಧಕದ ಮೂಲಕ ಮಾಹಿತಿ ನೀಡುತ್ತಿದ್ದಾರೆ.
ಕೊರೊನಾ ಹರಡದಂತೆ ತಡೆಯಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ವಿವರಿಸುತ್ತಿದ್ದಾರೆ. ಹಿರಿಯರು, ಗರ್ಭಿಣಿಯರು, ಆರೋಗ್ಯ ಸಮಸ್ಯೆ ಇರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶೀತ, ಕಫ, ಜ್ವರ ಮೊದಲಾದ ಆರೋಗ್ಯ ಸಮಸ್ಯೆಯಿಂದ ಬಳಲುವವರು ಸ್ಥಳೀಯರು ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು. ಗಡಿ ಪ್ರದೇಶದಲ್ಲಿ ಕೇರಳದಿಂದ ಬಂದಿರುವ ಪ್ರಯಾಣಿಕರು ಗುಂಪು ಸೇರಬಾರದು. ಅಂತರ ಕಾಯ್ದುಕೊಳ್ಳಬೇಕು ಎಂದು ಧ್ವನಿವರ್ಧಕದ ಮೂಲಕ ತಿಳಿ ಹೇಳುತ್ತಿದ್ದಾರೆ.
ಕೋಟೆಕಾರು ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಗೋಪಿ ಪ್ರಕಾಶ್, ‘ಆರೋಗ್ಯ ಇಲಾಖೆಯ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ರಾಜ್ಯದ ಗಡಿ ಭಾಗದಲ್ಲಿ ಜನಜಾಗೃತಿ ಮೂಡಿಸುತ್ತಿದ್ದೇವೆ. ಕೇರಳ ಭಾಗದಿಂದ ಬರುವ ಪ್ರಯಾಣಿಕರಿಗೆ ಸೂಚನೆಗಳನ್ನು ನೀಡಲಾಗುತ್ತಿದೆ’ ಎಂದರು.
Discover more from Coastal Times Kannada
Subscribe to get the latest posts sent to your email.
Discussion about this post