ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 40ನೇ ವಾರ್ಷಿಕ ಘಟಿಕೋತ್ಸವ ಎ. 23ರಂದು ಬೆಳಗ್ಗೆ 11 ಗಂಟೆಗೆ ವಿ.ವಿ. ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ತಿಳಿಸಿದ್ದಾರೆ.
ಸುಪ್ರಿಂಕೋರ್ಟ್ ನ್ಯಾಯಾಧೀಶ ನ್ಯಾ| ಎಸ್. ಅಬ್ದುಲ್ ನಝೀರ್ ಮುಖ್ಯ ಅತಿಥಿಯಾಗಿ ಫಟಿಕೋತ್ಸವ ಭಾಷಣ ಮಾಡಲಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಉಪಸ್ಥಿತಿಯಲ್ಲಿ ಘಟಿಕೋತ್ಸವ ನಡೆಯಲಿದೆ. ಮಂಗಳೂರು ವಿ.ವಿ.ಯ ಘಟಿಕೋತ್ಸವದಲ್ಲಿ ಇದೇ ಮೊದಲ ಬಾರಿಗೆ ಅಧ್ಯಕ್ಷೀಯ ಭಾಷಣ ಇರಲಿದೆ ಎಂದು ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.
ಈ ಬಾರಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ, ಸಮಾಜ ಸೇವೆ ಮತ್ತು ಸಾಹಿತ್ಯದ ಸಾಧನೆಗಾಗಿ ಹರಿಕೃಷ್ಣ ಪುನರೂರು ಮತ್ತು ತುಳು ನಾಟಕ-ಸಿನೆಮಾ ಕ್ಷೇತ್ರದ ಸಾಧನೆಗಾಗಿ ದೇವದಾಸ್ ಕಾಪಿಕಾಡ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಅವರು ಹೇಳಿದರು.
ಹೇಮಾವತಿ ವೀ. ಹೆಗ್ಗಡೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆ ಅವರ ಪತ್ನಿ ಹೇಮಾವತಿ ವೀ. ಹೆಗ್ಗಡೆ ಅವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಟ್ರಸ್ಟಿಯಾಗಿ, ಎಸ್ಕೆಡಿಆರ್ಡಿಪಿಯ ಜನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜತೆಗೆ ಅನೇಕ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಹರಿಕೃಷ್ಣ ಪುನರೂರು : ಹರಿಕೃಷ್ಣ ಪುನರೂರು ಅವರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದವರು. ಧಾರ್ಮಿಕ, ಸಾಮಾಜಿಕವಾಗಿ ಸಕ್ರಿಯವಾಗಿ ತೊಡಗಿಕೊಂಡಿರುವ ಅವರು ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದಾರೆ.
ದೇವದಾಸ್ ಕಾಪಿಕಾಡ್ : ತುಳು ನಾಟಕಗಳ ಮೂಲಕ ಮುನ್ನೆಲೆಗೆ ಬಂದ ದೇವದಾಸ್ ಕಾಪಿಕಾಡ್ ಅವರು ತುಳು ರಂಗಭೂಮಿ ಹಾಗೂ ತುಳು ಚಿತ್ರರಂಗಕ್ಕೆ ಅವಿಸ್ಮರಣೀಯ ಸೇವೆ ಸಲ್ಲಿಸಿ ಮನೆ ಮಾತಾಗಿದ್ದಾರೆ.
Discussion about this post