ಮಂಗಳೂರು, ಜುಲೈ 22 : ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಮಂಜನಾಡಿ ಕಲ್ಕಟ್ಟ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಎಂಬವನನ್ನು ಬಂಧಿಸಲಾಗಿದೆ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ, ಪುತ್ತೂರು ನಗರ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಚೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವುದಲ್ಲದೇ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಕಾರಾಗೃಹದೊಳಗೆ ಇತರ ಕೈದಿಗಳಿಗೆ ಹಲ್ಲೆ ನಡೆಸಿರುವುದಲ್ಲದೇ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನ ನಡೆಸಿದ ಪ್ರಕರಣ ಸೇರಿದಂತೆ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳ ಪ್ರಕರಣಗಳಲ್ಲಿ ನ್ಯಾಯಾಲಯದ ಒಟ್ಟು 24 ವಾರಂಟ್ ಇರುತ್ತದೆ. ಈತನ ಮೇಲೆ ಕೇರಳ ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಸಹ ಹಲವಾರು ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post