ಮಂಗಳೂರು: ಮಾದಕ ವಸ್ತು (Methylene dioxy methamphetamine) MDMA ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು ಕದ್ರಿ ನಿವಾಸಿ ಕೌಶಿಕ್ ದೇವಾಡಿಗ(26), ಜಲ್ಲಿಗುಡ್ಡೆ ನಿವಾಸಿ ಇರ್ಷಾದ್ (29) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಮೂಡಬಿದಿರೆ ತಾಲೂಕು ಮುಲ್ಕಿ ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಬಸ್ ಸ್ಟಾಂಡ್ ಬಳಿ ಈ ಇಬ್ಬರು ಯುವಕರು ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಿ, ಅವರಿಂದ 9 ಗ್ರಾಂ ತೂಕದ 45,000 ರೂಪಾಯಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಈ ಹಿಂದೆಯೂ ಮೊಬೈಲ್ ಸುಲಿಗೆ, ಕೊಲೆ ಯತ್ನದಂತಹ ಕೆಲ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು. ಇದೀಗ ಮಾದಕ ವಸ್ತು ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post