ಬೆಂಗಳೂರು: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮೃತರ ಪತ್ನಿ ರಾಜೇಶ್ವರಿ ಶೆಟ್ಟಿಗೆ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತ್ತಿನಲ್ಲಿ ಇರಿಸಿ ಆದೇಶಿಸಿರುವ ಹೈಕೋರ್ಟ್, ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಕುರಿತಂತೆ ರಾಜೇಶ್ವರಿ ಶೆಟ್ಟಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಮತ್ತು ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಹಿರಿಯ ವಕೀಲ ಹಷ್ಮತ್ ಪಾಷ, ‘ಇದೊಂದು ಸಾಂದರ್ಭಿಕ ಘಟನೆಯಾಗಿದ್ದು, ಪ್ರಕರಣದಲ್ಲಿ ಹತ್ಯೆಗೀಡಾಗಿರುವ ಭಾಸ್ಕರ ಶೆಟ್ಟಿ ಅವರ ಪತ್ನಿಗೆ ಶಿಕ್ಷೆ ವಿಧಿಸಲಾಗಿದೆ. ಮೇಲ್ನೋಟಕ್ಕೆ ಇವರ ವಿರುದ್ಧ ಸಾಕ್ಷ್ಯಾಧಾರಗಳೇ ಇಲ್ಲ. ಹೋಮಕುಂಡದಲ್ಲಿ ಶವವನ್ನು ಸುಟ್ಟು ಹಾಕಲಾಗಿದೆ ಎಂಬುದಕ್ಕೂ ಯಾವುದೇ ಸಾಕ್ಷ್ಯ ದೊರೆತಿಲ್ಲ. ಡಿಎನ್‌ಎಗೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯ ನೀಡಿರುವ ವರದಿಯನ್ನು ನಂಬಲು ಸಾಧ್ಯವಿಲ್ಲ. ಇಂತಹ ಅಂಶಗಳನ್ನೆಲ್ಲಾ ವಿಚಾರಣಾ ನ್ಯಾಯಾಲಯ ಸರಿಯಾಗಿ ಪರಿಶೀಲನೆ ಮಾಡದೆ ಶಿಕ್ಷೆ ವಿಧಿಸಿದೆ. ಆದ್ದರಿಂದ, ಶಿಕ್ಷೆಯನ್ನು ಅಮಾನತ್ತಿನಲ್ಲಿ ಇರಿಸಿ ಜಾಮೀನು ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಜೀವಾವಧಿ ಶಿಕ್ಷೆಯನ್ನು ಅಮಾನತ್ತಿನಲ್ಲಿ ಇರಿಸಿ ಜಾಮೀನು ನೀಡಿ ಆದೇಶಿಸಿತು.
ಉದ್ಯಮಿ ಭಾಸ್ಕರ ಶೆಟ್ಟಿ 2016ರ ಜುಲೈ 28ರಂದು ಉಡುಪಿಯ ಇಂದ್ರಾಳಿಯಲ್ಲಿರುವ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಎಂಟು ದಿನಗಳ ಬಳಿಕ ಮಣಿಪಾಲ ಪೊಲೀಸರು ಅವರ ಪತ್ನಿ ರಾಜೇಶ್ವರ ಶೆಟ್ಟಿ ಮತ್ತು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಭಾಸ್ಕರ ಶೆಟ್ಟಿ ಕೊಲೆ ವಿಚಾರ ಬಹಿರಂಗವಾಗಿತ್ತು.
ಈ ಕೊಲೆ ಮತ್ತು ಕೊಲೆಗೆ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜೇಶ್ವರಿ ಶೆಟ್ಟಿ ಅವರನ್ನು ತಪ್ಪಿತಸ್ಥರು ಎಂದು ತೀರ್ಮಾನಿಸಿದ್ದ ಉಡುಪಿ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ 2021ರ ಜೂನ್ 8ರಂದು ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.