ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಸ್ಥಳೀಯಾಡಳಿತ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಕೆಪಿಸಿಸಿ ಮಾಜಿ ಉಪಾಧ್ಯಕ್ಷ, ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ ಮಂಗಳ ವಾರ ನಾಮಪತ್ರ ಸಲ್ಲಿಸಿದರು.
ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಿಂದ ಉಭಯ ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರು, ಜನಪ್ರತಿನಿಧಿಗಳ ಜತೆ ಡಿಸಿ ಕಚೇರಿಗೆ ಆಗಮಿಸಿದ ಭಂಡಾರಿಯವರು 3 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು.
ಪ್ರಥಮ ಪ್ರತಿ ಸಲ್ಲಿಕೆ ವೇಳೆ ಶಾಸಕ ಯು.ಟಿ. ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ, ಎರಡನೇ ಪ್ರತಿ ಸಲ್ಲಿಕೆ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ಮಂಜುನಾಥ ಪೂಜಾರಿ, ಹರಿಪ್ರಸಾದ್ ಹಾಗೂ ಮೂರನೇ ಪ್ರತಿ ಸಲ್ಲಿಕೆ ವೇಳೆ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ರಾದ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಉಪಸ್ಥಿತರಿದ್ದರು.