ಪುತ್ತೂರು, ಜೂನ್ 25 : ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ವಿವಾಹವಾಗಲು ನಿರಾಕರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನ ವಿರುದ್ಧ ಪುತ್ತೂರಿನಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಮುಖಂಡ, ವಾಸ್ತು ಶಿಲ್ಪಿ ಪಿಜಿ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ರಾವ್ (21) ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಲೇ ಪರಾರಿಯಾಗಿದ್ದಾನೆ. ಈತನ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಈತನಿಂದ ವಂಚನೆಗೆ ಒಳಗಾದ ಯುವತಿಯೂ ಪುತ್ತೂರಿನ ನಿವಾಸಿಯಾಗಿದ್ದು, ಇವರಿಬ್ಬರು ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಆರೋಪಿಯು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯುವತಿಯನ್ನು ಮನೆಗೆ ಕರೆತಂದು ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ನೊಂದ ಯುವತಿ ಜೂ. 24ರಂದು ರಾತ್ರಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿರುವ ವಿಚಾರ ತಿಳಿಯುತ್ತಿದ್ದಂತೆ ಆರೋಪಿ ಕೃಷ್ಣ ರಾವ್ ತಲೆ ಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.
ದೂರಿನಲ್ಲಿ ತಿಳಿಸಿರುವಂತೆ 2024ರ ಅಕ್ಟೋಬರ್ 11ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಕೃಷ್ಣ ರಾವ್, ಸಂತ್ರಸ್ತೆಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದು, ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಲು ಯತ್ನಿಸಿದ್ದು, ಯುವತಿ ವಿರೋಧಿಸಿದಾಗ ಮದುವೆಯಾಗುವುದಾಗಿ ನಂಬಿಸಿದ್ದ ಹಾಗೂ ಈ ವಿಷಯವನ್ನು ರಹಸ್ಯವಾಗಿಡುವಂತೆ ತಿಳಿಸಿದ್ದ. ಬಳಿಕ ಜನವರಿ ತಿಂಗಳಲ್ಲಿ ಮತ್ತೆ ಮನೆಗೆ ಕರೆಸಿ ಕೊಂಡು ದೈಹಿಕ ಸಂಪರ್ಕ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಇದರಿಂದಾಗಿ ಯುವತಿ ಗರ್ಭವತಿಯಾಗಿದ್ದು, ಈ ವಿಚಾರವನ್ನು ತನ್ನ ತಂದೆ ತಾಯಿಗೆ ತಿಳಿಸಿದ್ದಾಳೆ. ಬಳಿಕ ಮನೆಯವರು ಯುವಕನ ಮನೆಯವರಿಗೆ ವಿಚಾರ ತಿಳಿಸಿದಾಗ ಮಾತುಕತೆ ನಡೆದು ಮದುವೆಗೆ ಹುಡುಗನ ಕಡೆಯವರು ಒಪ್ಪಿಗೆ ನೀಡಿದ್ದರು ಎಂದು ಯುವತಿ ತಿಳಿಸಿದ್ದಾಳೆ. ಆದರೆ, ಈಗ ಯುವತಿ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಕೃಷ್ಣ ರಾವ್ ಮದುವೆಯಾಗಲು ನಿರಾಕರಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ 64(1) ಹಾಗೂ 69 ರಂತೆ ಪ್ರಕರಣ ದಾಖಲಿಸಿ ಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಕೃಷ್ಣ ಜೆ. ರಾವ್ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Discover more from Coastal Times Kannada
Subscribe to get the latest posts sent to your email.
Discussion about this post