ಬಂಟ್ವಾಳ: ತೆಂಕ್‌ಬೆಳ್ಳೂರು ಗ್ರಾಮದ ಕಮ್ಮಾಜೆ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಪೊಲೀಸರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಬಂಟ್ವಾಳ ಅಮ್ಮುಂಜೆ ನಿವಾಸಿ ಪ್ರಶಾಂತ್ (38), ತೆಂಕಬೆಳ್ಳೂರು ನಿವಾಸಿ ರಾಮದಾಸ್ (43) ಹಾಗೂ ಬಡಗಬೆಳ್ಳೂರು ನಿವಾಸಿ ಶಂಕರ (45) ಬಂಧಿತ ಆರೋಪಿಗಳು. ತೆಂಕ್‌ಬೆಳ್ಳೂರು ಗ್ರಾಮದ ನಿವಾಸಿ ಪ್ರಶಾಂತ್ ಬೆಳ್ಚಾಡ್ (41) ಹಲ್ಲೆಗೊಳಗಾದ ವ್ಯಕ್ತಿ.
ದಿನಾಂಕ 20-09-2026 ರಂದು ಸಂಜೆ ವೇಳೆ ಪ್ರಶಾಂತ್ ಬೆಳ್ಚಾಡ್ ಅವರು ತೆಂಕ್‌ಬೆಳ್ಳೂರು ಗ್ರಾಮದ ಕಮ್ಮಾಜೆ ಎಂಬಲ್ಲಿದ್ದಾಗ, ಆಟೋರಿಕ್ಷಾದಲ್ಲಿ ಬಂದ ಪರಿಚಯಸ್ಥರಾದ ಪ್ರಶಾಂತ್, ರಾಮದಾಸ್ ಹಾಗೂ ಶಂಕರ ಏಕಾಏಕಿ ತಲವಾರು ಮತ್ತು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯ ತೀವ್ರತೆಗೆ ಪ್ರಶಾಂತ್ ಬೆಳ್ಚಾಡ್ ಅವರಿಗೆ ಗಂಭೀರ ರಕ್ತಗಾಯಗಳಾಗಿದ್ದವು. ಈ ಸಂದರ್ಭದಲ್ಲಿ ಸ್ಥಳಕ್ಕೆ ಪರಿಚಯಸ್ಥರು ಧಾವಿಸಿ ಬರುವುದನ್ನು ಕಂಡ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಪ್ರಶಾಂತ್ ಅವರನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿದೆ.
ಘಟನೆ ಸಂಬಂಧ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 124/2026, ಕಲಂ 109 (ಕೊಲೆಯತ್ನ), 352, 351 ಜೊತೆಗೆ 3(5) BNS ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಬೆನ್ನತ್ತಿದ ಪೊಲೀಸರು ಮೂವರೂ ಆರೋಪಿಗಳನ್ನು ಬಂಧಿಸಿ ಸೆಪ್ಟಂಬರ್ 25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಘಟನೆಯ ಹಿಂದಿನ ಉದ್ದೇಶ ಹಾಗೂ ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳ ವಶಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಆರೋಪಿಗಳನ್ನು 3 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ.
Discover more from Coastal Times Kannada
Subscribe to get the latest posts sent to your email.







Discussion about this post