ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಏಕವಚನದಲ್ಲಿ ಅವಾಚ್ಯ ಪದ ಬಳಸಿ ನಿಂದನೆ ಮಾಡಿ, ಕಚೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದಿಂದ ಗೋವಾಕ್ಕೆ ತೆರಳುವಾಗ ಚಿಕ್ಕಬಳ್ಳಾಪುರ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಅಕ್ರಮವಾಗಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಕ್ಕೆ ಆಕ್ರೋಶಗೊಂಡ ರಾಜೀವ್ ಗೌಡ, ಜನವರಿ 12ರಂದು ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕರೆ ಮಾಡಿ ಧಮ್ಕಿ ಹಾಕಿದ್ದ. ಈ ಕುರಿತು ಜನವರಿ 14ರಂದು ಅಧಿಕೃತ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ರಾಜೀವ್ ಗೌಡ ತಲೆಮರೆಸಿಕೊಂಡಿದ್ದ.
ಇಂದು ಬೆಳಿಗ್ಗೆ ರಾಜೀವ್ ಗೌಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಖಚಿತ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಅಲರ್ಟ್ ಆಗಿದ್ದರು. ಆದರೆ ಬಂಧನದ ಮಾಹಿತಿ ತಿಳಿಯುತ್ತಿದ್ದಂತೆಯೇ ಮಂಗಳೂರಿನಿಂದ ಪರಾರಿಯಾಗಲು ಯತ್ನಿಸಿದ್ದ ರಾಜೀವ್ ಗೌಡ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.
‘ಬಂಧನ ಖಚಿತ. ಆದರೆ ಸದ್ಯ ಯಾವುದೇ ಮಾಹಿತಿ ನೀಡುವುದಿಲ್ಲ. ನಾಳೆ ಸಮಗ್ರವಾಗಿ ವಿವರ ನೀಡಲಾಗುವುದು’ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ತಿಳಿಸಿದರು. ಜ.22ರಂದು ರಾಜೀವ್ ಗೌಡ ಮಂಗಳೂರು ರೈಲ್ವೆ ನಿಲ್ದಾಣದಲ್ಲಿ ಕಾರನ್ನು ನಿಲ್ಲಿಸಿ ಕೇರಳಕ್ಕೆ ತೆರಳಿದ್ದರು. ಗೋವಾಕ್ಕೆ ಪ್ರಯಾಣಿಸುವ ವೇಳೆ ಕೇರಳದಲ್ಲಿ ಬಂಧಿಸಲಾಗಿದೆ. ಅವರನ್ನು ಚಿಕ್ಕಬಳ್ಳಾಪುರಕ್ಕೆ ಕರೆ ತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜೀವ್ ಗೌಡ ಬಂಧನಕ್ಕೆ ಚಿಕ್ಕಬಳ್ಳಾಪುರ ಸಿಇಎನ್ ಠಾಣೆ ಇನ್‌ಸ್ಪೆಕ್ಟರ್ ಸೂರ್ಯಪ್ರಕಾಶ್ ಮತ್ತು ಶಿಡ್ಲಘಟ್ಟ ವೃತ್ತ ಇನ್‌ಸ್ಪೆಕ್ಟರ್ ಆನಂದ್ ಕುಮಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಈ ತಂಡವೇ ರಾಜೀವ್ ಗೌಡ ಅವರನ್ನು ಬಂಧಿಸಿದೆ.
Discover more from Coastal Times Kannada
Subscribe to get the latest posts sent to your email.







Discussion about this post