ನವದೆಹಲಿ: ಬಿಜೆಪಿಯನ್ನು ವಿರೋಧಿಸುವ ಎಲ್ಲ ಪಕ್ಷಗಳು ಒಂದಾಗಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಇಲ್ಲಿ ಹೇಳಿದರು. ಕಾಂಗ್ರೆಸ್ ಮುಖಂಡರಾದ ಕಮಲನಾಥ್ ಹಾಗೂ ಆನಂದ ಶರ್ಮಾ ಅವರನ್ನು ಭೇಟಿ ಮಾಡಿದ ನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇದೆ. ಆದರೆ, ಬಿಜೆಪಿಯನ್ನು ಎದುರಿಸುವ ಸಲುವಾಗಿ ಎಲ್ಲ ವಿರೋಧ ಪಕ್ಷಗಳು ಈಗಿನಿಂದಲೇ ಕಾರ್ಯಪ್ರವೃತ್ತವಾಗಬೇಕು’ ಎಂದು ಪ್ರತಿಪಾದಿಸಿದರು.
‘ಮೈತ್ರಿಕೂಟದ ನೇತೃತ್ವವನ್ನು ಈ ದೇಶವೇ ವಹಿಸಿಕೊಳ್ಳುವುದು. ನಾನು ವಹಿಸಿಕೊಳ್ಳುವುದಿಲ್ಲ. ನಾವು ಹಿಂಬಾಲಕರಷ್ಟೇ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಆ ಮೂಲಕ ಅವರು, ಬಿಜೆಪಿ ವಿರೋಧಿ ಮೈತ್ರಿಕೂಟದ ನಾಯಕತ್ವದ ವಿಷಯ ವಿಪಕ್ಷಗಳ ನಡುವೆ ಗಲಾಟೆಗೆ ಕಾರಣವಾಗಬಾರದು ಹಾಗೂ ಮೈತ್ರಿಕೂಟ ರಚಿಸುವ ಪ್ರಯತ್ನಕ್ಕೆ ಅಡ್ಡಿಯನ್ನುಂಟು ಮಾಡಬಾರದು ಎಂಬ ಸಂದೇಶ ರವಾನಿಸಿದರು ಎಂದು ವಿಶ್ಲೇಷಿಸಲಾಗುತ್ತಿದೆ.
‘ಉತ್ತರ ಪ್ರದೇಶ, ಪಂಜಾಬ್ ಹಾಗೂ ತ್ರಿಪುರ ವಿಧಾನಸಭಾ ಚುನಾವಣೆಗಳೂ ಸಮೀಪಿಸುತ್ತಿವೆ. ಈ ಎಲ್ಲ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸುವ ಸಲುವಾಗಿ ಸಮಾನ ಮನಸ್ಕ ರಾಜಕೀಯ ಪಕ್ಷಗಳು ಒಂದಾಗುವುದು ಅಗತ್ಯ’ ಎಂದು ಅವರು ಪುನರುಚ್ಚರಿಸಿದರು.
ಪಶ್ಷಿಮ ಬಂಗಾಳದ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಅವರು ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದ್ದಾರೆ. ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಬುಧವಾರ ಭೇಟಿ ಮಾಡಲಿದ್ದಾರೆ. ಎನ್‌ಸಿಪಿ ವರಿಷ್ಠ ಶರದ್ ಪವಾರ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಇತರ ವಿರೋಧ ಪಕ್ಷಗಳ ಮುಖಂಡರನ್ನು ಸಹ ಅವರು ಭೇಟಿ ಮಾಡುವ ಸಾಧ್ಯತೆಗಳಿವೆ.