ಪುತ್ತೂರು: ಮಂಗಳೂರಿನ ಕೂಳೂರಿನಲ್ಲಿ ಸೆ.2ರಂದು ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿವಿಧ ಯೋಜನೆಗಳ 10 ಸಾವಿರ ಮಂದಿ ಫಲಾನುಭವಿಗಳು ಹಾಗೂ 15 ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಕಾರ್ಯಕ್ರಮಕ್ಕೆ ತೆರಳುವ ಫಲಾನುಭವಿಗಳಿಗೆ ವಾಹನ ಸೌಲಭ್ಯ ಹಾಗೂ ಊಟೋಪಚಾರದ ವ್ಯವಸ್ಥೆಯನ್ನು ತಾಲ್ಲೂಕು ಹಾಗೂ ಜಿಲ್ಲಾಡಳಿತ ಮಾಡಲಿದೆ. ಪಕ್ಷದ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ವಾಹನ ಸೌಲಭ್ಯ ಹಾಗೂ ಊಟದ ವ್ಯವಸ್ಥೆಯನ್ನು ಪಕ್ಷದ ವತಿಯಿಂದ ಮಾಡಲಾಗುವುದು ಎಂದು ಹೇಳಿದರು.
ನರೇಂದ್ರ ಮೋದಿಯವರು ಪ್ರಧಾನಿ ಮಂತ್ರಿಯಾದ ಬಳಿಕ ಎರಡನೇ ಬಾರಿ ಜಿಲ್ಲೆಗೆ ಬರುತ್ತಿದ್ದಾರೆ. ಜಿಲ್ಲೆಗೆ ನೀಡಿದ ಕೊಡುಗೆಗಳ ಹಾಗೂ ಸವಲತ್ತುಗಳ ಪ್ರಯೋಜನ ಪಡೆದ ಫಲಾನುಭವಿಗಳನ್ನು ಕಾರ್ಯಕ್ರಮದಲ್ಲಿ ಜೋಡಿಸಿಕೊಳ್ಳಲಾಗುವುದು. ಜಿಲ್ಲಾಡಳಿತ, ಜಿಲ್ಲೆಯ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಜನಪ್ರತಿನಿಧಿಗಳನ್ನು ಸೇರಿಕೊಂಡು ಕಾರ್ಯಕ್ರಮದ ಯಶಸ್ವಿಗಾಗಿ ಸಿದ್ಧತೆ ನಡೆದಿದೆ ಎಂದರು. ತಾಲ್ಲೂಕಿನ 220 ಬೂತ್‌ಗಳಿಂದ ಕನಿಷ್ಠ 15,000 ಮಂದಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಅವರನ್ನು ಕರೆದೊಯ್ಯಲು 75 ಖಾಸಗಿ ಬಸ್‌ಗಳು, 100 ಕೆಎಸ್‌ಆರ್‌ಟಿಸಿ ಬಸ್‌ಗಳು ಹಾಗೂ ಮಿನಿ ಬಸ್‌ಗಳನ್ನು ಬಳಸಲಾಗುವುದು. ಜತೆಗೆ ಸುಮಾರು 400ರಷ್ಟು ಖಾಸಗಿ ವಾಹನಗಳು ಇರಲಿವೆ ಎಂದು ಅವರು ಮಾಹಿತಿ ನೀಡಿದರು.
ವಾಹನ, ಊಟ ಸೌಲಭ್ಯ: ಪ್ರಧಾನಿಯವರ ಕಾರ್ಯಕ್ರಮಕ್ಕೆ ತೆರಳುವ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಪಕ್ಷದ ವತಿಯಿಂದ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನ, ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಳದ ಸಭಾಭವನ, ವಿಟ್ಲದ ಅಕ್ಷಯ ಸಭಾಭವನ, ಮಿತ್ತೂರು ಸೀತಾ ರಾಮಾಂಜನೇಯ ಭಜನಾ ಮಂದಿರ ಹಾಗೂ ಪೆರ್ನೆಯಲ್ಲಿ ಊಟದ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಸಂಜೀವ ಮಠಂದೂರು ತಿಳಿಸಿದರು ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಇದ್ದರು.
Discover more from Coastal Times Kannada
Subscribe to get the latest posts sent to your email.
Discussion about this post