ಬಂಟ್ವಾಳ: ‘ಕಳೆದ ವಿಧಾನಸಭಾ ಚುನಾವಣೆ ವೇಳೆ ಭಾರಿ ಸುದ್ದಿಯಾಗಿದ್ದ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾಡಿದ್ದ ರಾಜಕೀಯ ಪ್ರೇರಿತ ಸುಳ್ಳು ಆರೋಪ ದೂರವಾಗಿ ನೈಜತೆ ಜನತೆಗೆ ತಿಳಿಯಬೇಕು’ ಮಾಜಿ ಸಚಿವ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ.
ಇಲ್ಲಿನ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಭಾನುವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು, ‘ಸತ್ಯ ಮತ್ತು ನೈಜತೆ ಹೊರಬರಬೇಕು. ಮಾತ್ರವಲ್ಲದೆ ಸುಳ್ಳು ಆರೋಪ ಮಾಡಿದವರಿಗೂ ಶಿಕ್ಷೆಯಾಗಬೇಕು’ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಪದ್ಮನಾಭ ರೈ ಇದ್ದರು.
ಶರತ್ ಮಡಿವಾಳ ಹತ್ಯೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ನೇರ ಕಾರಣ ಎಂದು ಮೃತನ ತಂದೆ ತನಿಯಪ್ಪ ಮಡಿವಾಳ ಅವರು ಈಚೆಗೆ ಮಾಧ್ಯಮದ ಎದುರು ಮತ್ತೆ ಆರೋಪಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದನ್ನು ಇಲ್ಲಿ ಸ್ಮರಿಸಬಹುದು.