ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಿದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ. ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವ್ಯಕ್ತಿಯ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು. ಕೃತ್ಯದ ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದ ದುಷ್ಕರ್ಮಿಗಳು ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೊದಲ್ಲಿ ಕಂಡುಬಂದಿರುವ ವ್ಯಕ್ತಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ಫ್ಯೂ ವಿಸ್ತರಣೆ: ಉದಯಪುರ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳ ಕಾಲ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿ ಮಂಗಳವಾರ ಸಂಜೆಯೇ ಆದೇಶ ಹೊರಡಿಸಲಾತ್ತು. ಜತೆಗೆ, ಇಂಟರ್‌ನೆಟ್ ಸೇವೆಯನ್ನೂ ನಿರ್ಬಂಧಿಸಲಾಗಿತ್ತು. ಇದೀಗ ಜಿಲ್ಲೆಯ 7 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಲಾಗಿದೆ. ಧಾನ್ ಮಂಡಿ, ಘಂಟಾ ಘರ್, ಹಾಥಿ ಪೋಲ್, ಅಂಬ ಮಟ, ಸೂರಜ್ ಪೋಲ್, ಭೂಪಾಲ್‌ಪುರ ಹಾಗೂ ಸವಿನಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 8 ಗಂಟೆಯಿಂದ ಮುಂದಿನ ಆದೇಶದವರೆಗೆ ಕರ್ಫ್ಯೂ ಹೇರಲಾಗಿದೆ ಎಂದು ಉದಯಪುರ ಜಿಲ್ಲಾಧಿಕಾರಿ ತಾರಾಚಂದ್ ಮೀನಾ ಆದೇಶದಲ್ಲಿ ತಿಳಿಸಿದ್ದಾರೆ.